ಪಣಜಿ: ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಸಂಕಷ್ಟವನ್ನು ಎದುರಿಸಿ ಮುಖ್ಯಮಂತ್ರಿಯಾಗಿ ನಾನು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಹೆಚ್ಚು ಪ್ರಯತ್ನಿಸಿದ್ದೇನೆ. ಬಿಜೆಪಿ ಸರ್ಕಾರದ ಉತ್ತಮ ಆಡಳಿತವನ್ನು ಗಮನದಲ್ಲಿಟ್ಟುಕೊಂಡು ಜನತೆ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನೀಡಿ ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.
ಪಣಜಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. 2014 ರಿಂದ ಗೋವಾದಲ್ಲಿ ಸರ್ವಾಂಗೀಣ ಅಭಿವೃದ್ಧಿ ಆರಂಭಗೊಂಡಿದೆ. ಕಳೆದ 50 ವರ್ಷಗಳಲ್ಲಿ ರಾಜ್ಯದಲ್ಲಿ ಕೈಗೊಂಡಷ್ಟು ಅಭಿವೃದ್ಧಿ ಕಾರ್ಯವನ್ನು ಬಿಜೆಪಿ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಾಡಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನುಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ದಕ್ಷಿಣ ಗೋವಾ ಮಾಜಿ ಸಂಸದ ನರೇಂದ್ರ ಸಾವೈಕರ್ ಉಪಸ್ಥಿತರಿದ್ದರು.