ನವದೆಹಲಿ: ಉತ್ತರಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಗೋಕರ್ಣ ದೇವಸ್ಥಾನವನ್ನು ಮತ್ತೆ ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡಿ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಬುಧವಾರ ಮಧ್ಯಂತರ ಆದೇಶ ನೀಡಿದೆ.
ಗೋಕರ್ಣ ಮಠವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶ್ರೀರಾಮಚಂದ್ರಾಪುರ ಮಠ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಮುಂದಿನ ಆದೇಶದವರೆಗೂ ಗೋಕರ್ಣ ದೇವಾಲಯ ಶ್ರೀ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ತಿಳಿಸಿದೆ.
ಕಳೆದ 10 ವರ್ಷಗಳ ಬಳಿಕ ಮಠದ ಆಡಳಿತದಲ್ಲಿದ್ದ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಹೈಕೋರ್ಟ್ ಆದೇಶದಂತೆ ಇತ್ತೀಚೆಗಷ್ಟೇ ರಾಜ್ಯ ಸರ್ಕಾರಕ್ಕೆ ಹಸ್ತಾಂತರಗೊಂಡಿತ್ತು. ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರ ಆದೇಶದ ಮೇರೆಗೆ ಗೋಕರ್ಣ ದೇವಸ್ಥಾನ ಸರ್ಕಾರಕ್ಕೆ ಹಸ್ತಾಂತರಿಸಲಾಗಿದ್ದು, ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ದೇವಸ್ಥಾನದ ಆಡಳಿತ ನೋಡಿಕೊಂಡಿತ್ತು.
ಏನಿದು ಪ್ರಕರಣ:
ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು 2008ರ ಆಗಸ್ಟ್ ನಲ್ಲಿ ಅಂದಿನ ಬಿಜೆಪಿ ಸರ್ಕಾರ ಹೊಸನಗರದ ರಾಮಚಂದ್ರಾಪರ ಮಠಕ್ಕೆ ಹಸ್ತಾಂತರ ಮಾಡಿತ್ತು. ಹಸ್ತಾಂತರ ಆದೇಶ ಪ್ರಶ್ನಿಸಿ ಬಾಲಚಂದ್ರ ದೀಕ್ಷಿತ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ, ಪ್ರತಿವಾದದ ಬಳಿಕ ದೇವಾಲಯವನ್ನು ಧಾರ್ಮಿಕ ದತ್ತಿ ಇಲಾಖೆಯಿಂದ ಕೈಬಿಟ್ಟಿದ್ದು ಸರಿಯಲ್ಲ ಎಂದು ಗೋಕರ್ಣ ದೇವಾಲಯವನ್ನು ಮತ್ತೆ ಸರ್ಕಾರದ ಸುಪರ್ದಿಗೆ ಒಪ್ಪಿಸಿ ತೀರ್ಪು ನೀಡಿತ್ತು.