ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಗೋಲಿಬಾರ್ ಘಟನೆಗೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖೆ ಮಾ.24ರೊಳಗೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಘಟನೆಯನ್ನು ಎಸ್‌ಐಟಿ ತನಿಖೆಗೆ ವಹಿಸಲು ಕೋರಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮತ್ತಿತರರು ಸಲ್ಲಿಸಿದ್ದ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆ ನಡೆಯಿತು.
ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟ್ರೇಟ್ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 74 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಮಾ.24ರೊಳಗೆ ತನಿಖೆ ಪೂರ್ಣಗೊಳ್ಳಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅಲ್ಲದೇ, ಘಟನೆಯಲ್ಲಿ ಮರಣ ಹೊಂದಿದ ವ್ಯಕ್ತಿಗಳ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳು ಪೊಲೀಸರ ವಿರುದ್ಧ ಸಲ್ಲಿಸಿರುವ ದೂರುಗಳ ಬಗ್ಗೆ ಒಂದು ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಅದರ ತನಿಖೆಯೂ ನಡೆಯತ್ತಿದೆ ಎಂದರು. ಈ ಕುರಿತು ಪ್ರಶ್ನಿಸಿದ ನ್ಯಾಯಪೀಠ, ಹಿಂಬರಹ ವಾಪಸ್ ಪಡೆದುಕೊಳ್ಳುವಂತೆ ನಿರ್ದೇಶಿಸಿತು.
ಇದಕ್ಕೆ ಅಡ್ವೋಕೇಟ್ ಜನರಲ್ ಸಹಮತ ವ್ಯಕ್ತಪಡಿಸಿದರು. ಘಟನೆ ನಡೆದ ದಿನದ ಎಲ್ಲಾ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಸಂರಕ್ಷಿಸಿಡಬೇಕು. ಎಷ್ಟು ಸಿಸಿ ದೃಶ್ಯಾವಳಿಗಳಿವೆ, ಎಷ್ಟು ಕ್ಯಾಮರಾಗಳಲ್ಲಿ ಸೆರೆ ಹಿಡಿಯಲಾಗಿದೆ, ಅವುಗಳ ಗುಣಮಟ್ಟ ಮತ್ತು ಗಾತ್ರ ಎಷ್ಟಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕು
-ಎಂದು ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ನೀಡಿದ್ದ ನಿರ್ದೇಶನದಂತೆ ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಪ್ರಮಾಣಪತ್ರ ಸಲ್ಲಿಸಿದ್ದು, ಸಾರ್ವಜನಿಕ ಪ್ರಕಟಣೆ ನೀಡಿದ ಬಳಿಕ, ಒಬ್ಬರು 50 ವಿಡಿಯೋ ದೃಶ್ಯಾವಳಿಗಳ ವಿವರಗಳನ್ನು ಸಿ.ಡಿ ಹಾಗೂ ಪೆನ್‌ಡ್ರೈವ್‌ನಲ್ಲಿ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.