ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಕ್ಕೆ ಬಿಜೆಪಿಯಿಂದ ಕಣಕ್ಕಿಳಿದಿರುವ ಅನರ್ಹ ಶಾಸಕ ಕೆ. ಗೋಪಾಲಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಸಿಗದ ಕಾರಣ ಉತ್ತರ ಕರ್ನಾಟಕ ಮೂಲದ ಡಾ. ಗಿರೀಶ್ ಕೆ. ನಾಶಿ ಅವರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಈ ಮಧ್ಯೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಗಿರೀಶ್ ನಾಶಿ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಜೆಡಿಎಸ್‌ಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ ಅನರ್ಹ ಶಾಸಕ ಕೆ. ಗೋಪಾಲಯ್ಯಗೆ ಪ್ರಬಲ ಪೈಪೋಟಿ ನೀಡಬಲ್ಲ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ತೀವ್ರ ಹುಡುಕಾಟ ನಡೆಸಿದ ಎಚ್‌ಡಿಡಿ ಮತ್ತು ಎಚ್‌ಡಿಕೆಗೆ ಸೂಕ್ತ ಅಭ್ಯರ್ಥಿ ಸಿಕ್ಕಿಲ್ಲ. ಗೋಪಾಲಯ್ಯ ಸಂಬಂಧಿ ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಬೆಮೆಲ್ ಕಾಂತ್‌ರಾಜ್ ಸ್ಪರ್ಧೆಗೆ ಹಿಂದೇಟು ಹಾಕಿದ್ದರಿಂದ ಕೊನೆಗೆ ಕಾಂಗ್ರೆಸ್‌ನಿಂದ ಹೊರಬಂದ ಉತ್ತರ ಕರ್ನಾಟಕ ಮೂಲದ ಗಿರೀಶ್ ನಾಶಿಗೆ ಮಣೆ ಹಾಕಲಾಗಿದೆ.
ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಭದ್ರೇಗೌಡರಿಗೆ ಸ್ಪರ್ಧೆಗೆ ಒಲವು ಇತ್ತಾದರೂ ವರಿಷ್ಠರು ಟಿಕೆಟ್ ನೀಡಲು ಹಿಂದೇಟು ಹಾಕಿದರು. ಇದರಿಂದ ಮುನಿಸಿಕೊಂಡಿರುವ ಭದ್ರೇಗೌಡರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ನಾಲ್ವರು ಪಾಲಿಕೆ ಸದಸ್ಯರಿದ್ದು, ಇಬ್ಬರು ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಜೆಡಿಎಸ್ ಘಟಕದ ಬಹುತೇಕ ಪದಾಧಿಕಾರಿಗಳು ಗೋಪಾಲಯ್ಯ ಜೊತೆ ಇದ್ದು, ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಸವಾಲು ಎದುರಿಸಬೇಕಾಗಿದೆ.
ಈ ಮಧ್ಯೆ, ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಘೋಷಣೆ ಯಾದ ನಂತರವೂ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಸ್ಪರ್ಧೆಗೆ ಹಿಂದೇಟು ಹಾಕಿದ್ದರಿಂದ ಎಚ್‌ಡಿಕೆ ಆಪ್ತ ಶಿಡ್ಲಘಟ್ಟ ಮೂಲದ ರಾಧಾಕೃಷ್ಣ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಸಂಬಂಧ ರಾಧಾಕೃಷ್ಣ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿ ಮನವೊಲಿಸಿದ್ದಾರೆ. ಸೋಮವಾರ ರಾಧಾಕೃಷ್ಣ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಪ್ರಚಾರಕ್ಕೆ ಚಾಲನೆ: ಉಪ ಚುನಾವಣೆ ಪ್ರಚಾರಕ್ಕೆ ಜೆಡಿಎಸ್ ಸೋಮವಾರ ಚಾಲನೆ ನೀಡಲಿದೆ. ಮಹಾಲಕ್ಷ್ಮೀಲೇಔಟ್ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ವೇಳೆ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ರಾಧಾಕೃಷ್ಣ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.
12 ಕ್ಷೇತ್ರಗಳಿಗೆ ಮಾತ್ರ ಸೀಮಿತ: ಎಲ್ಲ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಆದರೆ, ಮೊದಲ ಹಂತದಲ್ಲಿ 10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರಿಗೆ ಬೆಂಬಲ ಸೂಚಿಸಲಾಗಿತ್ತು. ಇದರ ಜೊತೆಗೆ ಗೋಕಾಕ್, ಅಥಣಿ, ಕಾಗವಾಡ ಕ್ಷೇತ್ರಗಳಿಗೆ ಜೆಡಿಎಸ್‌ಗೆ ಅಭ್ಯರ್ಥಿಗಳು ಸಿಕ್ಕಿಲ್ಲ. ಈ ಕ್ಷೇತ್ರಗಳಿಗೆ ಯಾರಾದರೂ ಮುಂದೆ ಬಂದರೆ ಟಿಕೆಟ್ ನೀಡುವ ಬಗ್ಗೆ ಆಲೋಚನೆ ಇದೆ. ಈ ಮಧ್ಯೆ, ಮಹಾಲಕ್ಷ್ಮೀಲೇಔಟ್ ಹಾಗೂ ಚಿಕ್ಕಬಳ್ಳಾಪುರದಲ್ಲಿ ಅಭ್ಯರ್ಥಿಗಳು ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ, 15 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಜೆಡಿಎಸ್ ಸದ್ಯ 12 ಕ್ಷೇತ್ರಗಳಿಗೆ ಮಾತ್ರ ಸೀಮಿತವಾದಂತಾಗಿದೆ.
ಪೂಜಾರಿಗೆ ಗಾಳ?: ಗೋಕಾಕ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಪೂಜಾರಿಗೆ ಜೆಡಿಎಸ್ ಗಾಳ ಹಾಕಿದೆ ಎನ್ನಲಾಗಿದೆ. ಪೂಜಾರಿ ಅವರನ್ನು ಜೆಡಿಎಸ್‌ನತ್ತ ಸೆಳೆಯುವ ಪ್ರಯತ್ನಗಳು ನಡೆದಿದ್ದು, ಈ ಬಗ್ಗೆ ಜಿಲ್ಲಾ ನಾಯಕರು ಮಾತುಕತೆ ನಡೆಸುತ್ತಿದ್ದಾರೆ. ಜಿಲ್ಲಾ ನಾಯಕರಿಗೆ ಬಿ ಫಾರಂ ನೀಡಲಾಗಿದ್ದು, ಸೋಮವಾರ ಅವರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.