ಬೆಳಗಾವಿ: ನಗರದ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು ಪೂರೈಕೆ ಯೋಜನೆಗೆ ಇದುವರೆಗೆ ಅಡ್ಡಿಯಾಗಿದ್ದ ಎಲ್ಲ ತಾಂತ್ರಿಕ ಸಮಸ್ಯೆಗಳು ನಿವಾರಣೆಯಾಗಿ ಯೋಜನೆಯ ಅನುಷ್ಠಾನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದ್ದು, ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಅವರು ಪತ್ರಿಕಾ ಹೇಳಿಕೆ ಮೂಲಕ ಈ ವಿಷಯ ತಿಳಿಸಿದ್ದು, ನಗರದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಜನರ ಬಹುದಿನಗಳ ಬೇಡಿಕೆ ಈಡೇರಲಿದೆ ಎಂದು ತಿಳಿಸಿದ್ದಾರೆ.
ಸದ್ಯ ನಗರದ ಹತ್ತು ವಾರ್ಡ್‌ಗಳಲ್ಲಿ ನಿರಂತರ ನೀರು ಪೂರೈಕೆ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯನ್ನು ಉಳಿದ 48 ವಾರ್ಡ್‌ಗಳಿಗೆ ವಿಸ್ತರಿಸುವ ಯೋಜನೆ ಕುರಿತು ಕಳೆದ ಹಲವಾರು ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಐದು ವರ್ಷಗಳ ಹಿಂದೆಯೇ ಈ ಯೋಜನೆಗೆ ಟೆಂಡರ್ ಕರೆಯಲಾಗಿತ್ತು, ಗುತ್ತಿಗೆದಾರ ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭವಾಗಿಲ್ಲ. ಈ ಯೋಜನೆಗೆ ಮರು ಟೆಂಡರ್ ಕರೆಯದ ಕಾರಣ ಇದು ನನೆಗುದಿಗೆ ಬಿದ್ದಿದೆ ಎಂದು ಅಭಯ ಪಾಟೀಲ ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸರಕಾರದ ಮುಖ್ಯ ಹೆಚ್ಚುವರಿ ಕಾರ್ಯದರ್ಶಿ ಡಿ. ವಿ. ಪ್ರಸಾದ ಬೆಳಗಾವಿ ನಗರದ 48 ವಾರ್ಡ್ಗಳಿಗೆ ನಿರಂತರ ನೀರು ಪೂರೈಸುವ ಯೋಜನೆಗೆ ಅಡ್ಡಿಯಾಗಿರುವ ಎಲ್ಲ ತಾಂತ್ರಿಕ ತೊಂದರೆಗಳನ್ನು ನಿವಾರಿಸಬೇಕು. ಯೋಜನೆಯ ಮಂಜೂರಾತಿಗೆ ಕೂಡಲೇ ವಿಶ್ವಬ್ಯಾಂಕ್‌ನಿಂದ ಅನುಮತಿ ಪಡೆಯಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, 6 ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕೆ.ಯು.ಐ.ಡಿ.ಎಫ್.ಸಿ. ವ್ಯವಸ್ಥಾಪಕ ನಿರ್ದೇಶಕ ಇಬ್ರಾಹಿಮ್ ಅವರಿಗೆ ಸೂಚನೆ ನೀಡಿದರು ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.