Advertisement

“ಉತ್ತರ”ದತ್ತ ಈಗ ಸರ್ಕಾರಿ ಕಚೇರಿಗಳು

06:00 AM Dec 20, 2018 | |

ಬೆಳಗಾವಿ: ಉತ್ತರ ಕರ್ನಾಟಕ ಭಾಗಕ್ಕೆ ಕಚೇರಿ ಸ್ಥಳಾಂತರಿಸಲು ಬುಧವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿರುವ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ನಿಗಮ, ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಆಯುಕ್ತರ ಕಚೇರಿ, ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮಂಡಳಿ ಸ್ಥಾಪಿಸಲು ಸಂಪುಟ ಒಪ್ಪಿಕೊಂಡಿದೆ.

Advertisement

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಪುರಾತತ್ವ ಮತ್ತು ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯನ್ನು ಸ್ಥಳಾಂತರಿಸುವುದು. ಕಾನೂನು ಇಲಾಖೆಯ ವ್ಯಾಪ್ತಿಯಲ್ಲಿರುವ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬರ ಕಚೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಮಾಹಿತಿ ಆಯೋಗದ ಆಯುಕ್ತರ ಪೈಕಿ ಎರಡು ಮಾಹಿತಿ ಆಯುಕ್ತರ ಕಚೇರಿ ಕಲಬುರಗಿಗೆ ಹಾಗೂ ಎರಡು ಆಯುಕ್ತರ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ಲಭಿಸಿದೆ.

ಇದೇ ಇಲಾಖೆ ವ್ಯಾಪ್ತಿಯ ಕರ್ನಾಟಕ ಲೋಕಾಯುಕ್ತದಲ್ಲಿರುವ ಎರಡು ಉಪ ಲೋಕಾಯುಕ್ತ ಕಚೇರಿಗಳ ಪೈಕಿ ಒಂದು ಉಪ ಲೋಕಾಯುಕ್ತ ಕಚೇರಿಯನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಎಲ್ಲ ಇಲಾಖೆಗಳನ್ನು ಸುವರ್ಣಸೌಧದಲ್ಲಿ ಆರಂಭಿಸಬೇಕೆ ಅಥವಾ ಬೇರೆ ಕಡೆಯಲ್ಲಿ ಪ್ರಾರಂಭಿಸಬೇಕೆ ಎಂಬ ಕುರಿತಂತೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ ಎನ್ನಲಾಗಿದೆ. ವಿಧಾನ ಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್‌ ಸಭಾಪತಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಕಾಯ್ದೆ ಜಾರಿಗೆ ಒತ್ತಾಯ:
ಎಸ್ಸಿ ಎಸ್ಟಿ ನೌಕರರ ಮುಂಬಡ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯನ್ನು ಜಾರಿಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಮತ್ತೆ ಮನವಿ ಮಾಡಿದ್ದಾರೆ. ಆದರೆ, ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರವಾದ ಮಂಡಿಸುತ್ತಿರುವ ನ್ಯಾಯವಾದಿಗಳ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅಲ್ಲದೆ, ಸನ್ನಡತೆ ಆಧಾರದಲ್ಲಿ ಖೈದಿಗಳ ಬಿಡುಗಡೆಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಲು ಕಾನೂನು ತಿದ್ದುಪಡಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next