ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟದಿಂದ ಆಡಳಿತ ಯಂತ್ರ ಚುರುಕಾಗಬೇಕಾಗಿದೆ ಎಂದು ಉಪ
ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಇಲಾಖಾ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಧಿಕಾರಿಗಳು ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ತಹಸೀಲ್ದಾರ್, ಜಿಲ್ಲಾಧಿಕಾರಿಗಳು,ಉಪ ವಿಭಾಗಾಧಿಕಾರಿಗಳ ಹಂತದಲ್ಲೇ ದೂರು, ಅರ್ಜಿಗಳು ಶೀಘ್ರ ಇತ್ಯರ್ಥಪಡಿಸಲು ಮುಂದಾಗಬೇಕು. ಆಗ, ಜನತೆ ಸಮಸ್ಯೆ ಹೇಳಿಕೊಂಡು ಇಲ್ಲಿವರೆಗೆ ಬರುವುದಿಲ್ಲ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
ಈಗಾಗಲೇ ಮಳೆಯ ಅನಾಹುತಗಳು ವರದಿಯಾಗುತ್ತಿವೆ. ಮುಂದೆ ಇದು ತೀವ್ರವಾಗಬಹುದು.ಅಧಿಕಾರಿಗಳು ಪರಿಹಾರ, ಪುನರ್ವಸತಿ ಸೇರಿ ಇತರ ಕ್ರಮ ಕೈಗೊಳ್ಳಲು ಸಜ್ಜಾಗಬೇಕೆಂದು ತಿಳಿಸಿದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ಬಂದಿದೆ. ಇದಕ್ಕೆ ಯಾರು ಹೊಣೆ? ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಸರ್ಕಾರಿ ಶಾಲೆಗಳಿಗೆ ಯಾಕೆ ಪೋಷಕರು ತಮ್ಮ ಮಕ್ಕಳನ್ನು ಸೇರಿಸುವುದಿಲ್ಲ ಎಂದು ಪ್ರಶ್ನಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಆರ್ಥಿಕ ಸಲಹೆಗಾರ ಡಾ.ಸುಬ್ರಹ್ಮಣ್ಯ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.