Advertisement

ಸರ್ಕಾರ ಪತನ ಯತ್ನ; ಮೋದಿ ಕೈವಾಡವಿಲ್ಲ

12:35 AM Feb 05, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಕೆಡವುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರಮೋದಿ ಕೈವಾಡ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ನಾಯಕರು ಆಪರೇಷನ್‌ ಕಮಲ ಕಾರ್ಯಾಚರಣೆ ಮೂಲಕ ಸರ್ಕಾರ ಕೆಡವಲು ಪ್ರಯತ್ನಿಸುತ್ತಿ ದ್ದಾರೆಂದು ದೂರಿದರು.

ಮೋದಿ ಸಮ್ಮಿಶ್ರ ಸರ್ಕಾರ ಪತನಗೊಳಿಸುವ ವಿಚಾರದಲ್ಲಿ ಆಸಕ್ತರಾಗಿಲ್ಲ ಹಾಗೂ ಅವರ ಸೂಚನೆಯೂ ಇಲ್ಲ ಎಂಬುದು ನನ್ನ ನಂಬಿಕೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ನಂತರ ಅತಂತ್ರ ಸ್ಥಿತಿ ನಿರ್ಮಾಣವಾಗಿ ಮೂರು ದಿನ ಮಾತ್ರ ಮುಖ್ಯಮಂತ್ರಿ ಆಗಿದ್ದಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರಿಗೆ ನೋವಿದೆ. ಹೀಗಾಗಿ, ಅವರಿಗೆ ಹೇಗಾದರೂ ಮಾಡಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕೂರಬೇಕೆಂಬ ಆಸೆಯಿದೆ. ಅದಕ್ಕಾಗಿ ಶಾಸಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಿವಾಸಕ್ಕೆ ಕರೆಸಿಕೊಂಡು ಚರ್ಚೆ: ಈ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೋಮವಾರ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ ಅವರನ್ನು ಪದ್ಮನಾಭನಗರ ನಿವಾಸಕ್ಕೆ ಕರೆಸಿಕೊಂಡು ಚರ್ಚೆ ನಡೆಸಿದರು.

Advertisement

ಜೆಡಿಎಸ್‌ ಕೋಟಾದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಹಾಗೂ ಸಂಸದೀಯ ಕಾರ್ಯದರ್ಶಿ ಹುದ್ದೆಗಳನ್ನು ಒಂದೆರಡು ದಿನಗಳಲ್ಲಿ ಭರ್ತಿ ಮಾಡುವ ಬಗ್ಗೆ ಚರ್ಚಿಸಲಾಯಿತು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ಜತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಅನುಭವಿಸಿದವರಿಗೂ ಅವಕಾಶ ಕಲ್ಪಿಸಬೇಕು. ಜಾತಿವಾರು, ಪ್ರದೇಶಾವಾರು ಪ್ರಾತಿನಿಧ್ಯ ನೀಡಬೇಕು ಎಂದು ಎಚ್.ವಿಶ್ವನಾಥ್‌ ಹಾಗೂ ವೈ.ಎಸ್‌.ವಿ.ದತ್ತಾ ಗೌಡರ ಮುಂದೆ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದೆ.

ಜತೆಗೆ ಪಕ್ಷ ಸಂಘಟನೆಗಾಗಿ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳ ಬದಲಾವಣೆ, ನೂತನ ಕಾರ್ಯಾಧ್ಯಕ್ಷರ ನೇಮಕ ಮತ್ತಿತರ ವಿಚಾರಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ.

ಎಚ್ಡಿಡಿ-ಎಚ್‌ಡಿಕೆ ಭೇಟಿ
ಬುಧವಾರದಿಂದ ಜಂಟಿ ಅಧಿವೇಶನ ಹಾಗೂ ಶುಕ್ರವಾರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಚರ್ಚೆ ಜತೆಗೆ ಬಜೆಟ್ ಕುರಿತು ಗೌಡರಿಗೆ ಸಲಹೆ ಸೂಚನೆ ಪಡೆದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next