Advertisement

Government Employees: ಒಪಿಎಸ್‌ ಮರು ಜಾರಿಗೆ ಸೂಕ್ತ ನಿರ್ಣಯ: ಸಿಎಂ ಸಿದ್ದರಾಮಯ್ಯ

11:19 PM Aug 17, 2024 | Team Udayavani |

ಬೆಂಗಳೂರು:  ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ತರಲು ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

Advertisement

ರಾಜ್ಯ ಸರಕಾರಿ ನೌಕರರ ಸಂಘ ಅರಮನೆ ಮೈದಾನದಲ್ಲಿ 7ನೇ ವೇತನ ಆಯೋಗ ಶಿಫಾರಸುಗಳನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಿದ್ದ “ನಮ್ಮಭಿಮಾನದ ಅಭಿನಂದನೆ’ ಸಮಾರಂಭದಲ್ಲಿ ಮಾತನಾಡಿ, ಒಪಿಎಸ್‌ ಜಾರಿಗೆ ಸಂಬಂಧಪಟ್ಟಂತೆ ಅಧ್ಯಯನ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಅದಷ್ಟು ಬೇಗ ವರದಿ ನೀಡುವಂತೆ ಸೂಚಿಸಲಾಗಿದೆ. ಸರಕಾರಕ್ಕೆ ಸಮಿತಿ ವರದಿ ನೀಡಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು.

ಪದವೀಧರ ಶಿಕ್ಷಕರ ವೇತನ ಸಮಸ್ಯೆ ಮತ್ತು ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಸರಕಾರಿ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸರಕಾರ ಜಾರಿ ಮಾಡುವ ಯೋಜನೆಗಳು ಮತ್ತು ಕಾರ್ಯಕ್ರಮಗಳು ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ತಲುಪಿಸಿದಾಗ ಮಾತ್ರ ನಮ್ಮೆಲ್ಲರ ಶ್ರಮ ಸಾರ್ಥಕವಾಗಲಿದೆ. ಹೀಗಾಗಿ ನಾವೆಲ್ಲರೂ ಸೇರಿ ಸ್ವಸ್ಥ ಸಮಾಜ ರೂಪಿಸಬೇಕಿದೆ ಎಂದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಮೊದಲಾದವರಿದ್ದರು.

ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ
ಭಾಷಣ ಮುಗಿಸಿ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಳಿತುಕೊಂಡಿದ್ದಾಗ ಯುವಕನೊಬ್ಬ ವೇದಿಕೆ ಮುಂಭಾಗದಿಂದ ಓಡಾಡಿ ಒಂದು ಶಾಲು ಹೊದೆಸಲು ಪ್ರಯತ್ನಿಸಿದನು. ಕೂಡಲೇ ಪೊಲೀಸರು, ಅಕ್ಕಪಕ್ಕದವರು ಆತನನ್ನು ತಡೆದರು. ಆತ ಸರಕಾರಿ ನೌಕರನಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ವಿಚಾರಣೆಗೆ ಸದಾಶಿವನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ನಮ್ಮ ಸರಕಾರ ಬದ್ಧವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಸ್ಯೆ ಈಡೇರಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆ ಪರಿಹರಿಸಲು ಮುಂದಾಗಿದ್ದೇವೆ. – ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

ಸರಕಾರಿ ನೌಕರರ ಸಂಘದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ. ಅದಷ್ಟೂ ಬೇಗ ಹಳೆ ಪಿಂಚಣಿ ಯೋಜನೆ ಜಾರಿಗೆ ಬಂದರೆ ಲಕ್ಷಾಂತರ ನೌಕರರಿಗೆ ಅನುಕೂಲವಾಗಲಿದೆ. ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯರೂಪಕ್ಕೆ ತರಲು ಸರಕಾರ ಸ್ಪಂದಿಸಿದೆ. – ಸಿ.ಎಸ್‌. ಷಡಾಕ್ಷರಿ, ಅಧ್ಯಕ್ಷ, ರಾಜ್ಯ ಸರಕಾರಿ ನೌಕರರ ಸಂಘ

Advertisement

Udayavani is now on Telegram. Click here to join our channel and stay updated with the latest news.

Next