ಸಾಗರ: ಕಾಲೇಜು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಗಮನ ಹರಿಸಿದ್ದು, ಈ ಬಾರಿ 5,800 ಕೋಟಿ ರೂಪಾಯಿ ಅನುದಾನ ನೀಡಿದ್ದು, ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್.ಅಶ್ವತ್ಥ ನಾರಾಯಣ್ ತಿಳಿಸಿದರು.
ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡು, ಅತಿಥಿ ಉಪನ್ಯಾಸಕರ ಅಹವಾಲು ಆಲಿಸಿ ಮಾತನಾಡಿದ ಅವರು, ಸರ್ಕಾರ ನೀಡುವ ಹಣದಲ್ಲಿ ಶೇ. 95ರಷ್ಟು ವೇತನಕ್ಕೆ ಹೋಗುತ್ತಿದ್ದು, ಹೆಚ್ಚಿನ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1,242 ಪ್ರಾಧ್ಯಾಪಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಜೊತೆಗೆ ವಿವಿಧ ಸ್ತರದ 6500 ಹುದ್ದೆ ಖಾಲಿ ಇದ್ದು ಎಲ್ಲವನ್ನೂ ತ್ವರಿತವಾಗಿ ಭರ್ತಿ ಮಾಡಲಾಗುತ್ತದೆ. ಅತಿಥಿ ಉಪನ್ಯಾಸಕರು ಕೇಳಿದ್ದಕ್ಕಿಂತ ಎರಡು ಪಟ್ಟು ಹೆಚ್ಚು ಗೌರವಧನ ನೀಡಲಾಗುತ್ತಿದ್ದು ಇದು ಸದುಪಯೋಗವಾಗಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅತಿಥಿ ಉಪನ್ಯಾಸಕರು ತಮಗೆ ನೀಡುವ ಸಂಬಳಕ್ಕೆ ತಕ್ಕಂತೆ ಕೆಲಸ ಮಾಡಬೇಕು. ತಮಗೆ ನೀಡಿದ ಅವಧಿಯಲ್ಲಿ ಪಾಠಪ್ರವಚನ ಮಾಡದೆ ಹೋದಲ್ಲಿ ಅಂತಹ ಉಪನ್ಯಾಸಕರನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಗಂಗೋತ್ರಿ: ಸಿಎಂ ಬೊಮ್ಮಾಯಿ
ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಮಾತನಾಡಿ, ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು 3 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಹೊಂದಿದ್ದು, ಕಾಲೇಜು ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳುವ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಕಾಲೇಜಿನ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಸಚಿವರು ಇನ್ನಷ್ಟು ಒತ್ತು ನೀಡಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಟಿ.ಡಿ.ಮೇಘರಾಜ್, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಅಶೋಕ್ ಡಿ. ರೇವಣಕರ್, ಪ್ರಾಚಾರ್ಯ ಡಾ. ಸಣ್ಣಹನುಮಪ್ಪ ಉಪಸ್ಥಿತರಿದ್ದರು.