ಧಾರವಾಡ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಗತ್ಯವಿದ್ದಲ್ಲಿ ಸರ್ಕಾರದ ಆದೇಶದಂತೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಶೇ.50 ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸಲಾಗುವುದೆಂದು ಡಿಸಿ ನಿತೇಶ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿ ನೂತನ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆ ಹಾಗೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರಿಗೆ ಅಗತ್ಯ ಚಿಕಿತ್ಸೆ ನೀಡಲು ಔಷಧ ಮತ್ತು ಹಾಸಿಗೆ ವ್ಯವಸ್ಥೆ ಇದೆ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ರೆ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ರೋಗಿಗಳನ್ನು ರೆಫರಲ್ ಪತ್ರ ನೀಡಿ ಕಳಿಸಲಾಗುವುದು. ಮೂಲಸೌಕರ್ಯ ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಮೊದಲಿನಂತೆ ಸಹಕಾರ ನೀಡಬೇಕೆಂದರು.
ಈಗ ಕಿಮ್ಸ್ ಆಸ್ಪತ್ರೆಯಲ್ಲಿ 97 ಪ್ರಕರಣ, ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ 50, 32 ಐಸಿಯು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 929 ಕೋವಿಡ್ ಸಕ್ರಿಯ ಪ್ರಕರಣ ವರದಿಯಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 250 ರಷ್ಟು ಬೆಡ್ ಮೀಸಲಿಡಲಾಗಿದೆ.
ಅದರಲ್ಲಿ 97 ಬೆಡ್‌ಗಳನ್ನು ಭರ್ತಿ ಮಾಡಲಾಗಿದ್ದು, ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ (ಕಲಘಟಗಿ, ಕುಂದಗೋಳ, ನವಲಗುಂದ) ಸುಮಾರು 50ರಷ್ಟು ಬೆಡ್ ಮೀಸಲಿಟ್ಟು, ಚಿಕಿತ್ಸೆಗೆ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದ್ದು, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಪಡೆಯಿರಿ 2ನೇ ಡೋಸ್ ಲಸಿಕೆ: ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ತಪ್ಪದೇ 2ನೇ ಡೋಸ್ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಿಮ್ಸ್ ಆಸ್ಪತ್ರೆಯಲ್ಲಿ 200 ರೆಮಡಿಸಿವರ್, ಜಿಲ್ಲಾ ಆಸ್ಪತ್ರೆಯಲ್ಲಿ 200, ಜಿಲ್ಲಾ ಔಷಧ ದಾಸ್ತಾನುದಲ್ಲಿ 50 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 1000 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1500 ರೆಮಡಿಸಿವರ್ ಇಂಜಕ್ಷನ್ ಲಭ್ಯವಿದೆ. ಲಿಕ್ವಿಡ್ ಆಕ್ಸಿಜನ್ ಕೂಡಾ ಲಭ್ಯವಿದ್ದು, ಚಿಕಿತ್ಸೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ|ರಾಮಲಿಂಗಪ್ಪ ಅಂಟರಠಾಣಿ ಇದ್ದರು. ಜಿಲ್ಲಾ ಆರೋಗ್ಯ ಅ ಧಿಕಾರಿ ಡಾ|ಯಶವಂತ ಮದಿನಕರ, ಆರ್‌ಸಿಎಚ್‌ಒ ಡಾ|ಎಸ್.ಎಂ.ಹೊನಕೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಸುಜಾತಾ ಹಸವಿಮಠ, ಡಾ|ಶಶಿ ಪಾಟೀಲ, ಡಾ|ಎಸ್.ಎಂ.ನಿಂಬಣ್ಣವರ, ಡಿಮ್ಹಾನ್ಸ್ ಆಡಳಿತಾ ಧಿಕಾರಿ, ಖಾಸಗಿ ಆಸ್ಪತ್ರೆಗಳಾದ ನವನಗರ ಕ್ಯಾನ್ಸರ್ ಆಸ್ಪತ್ರೆ, ಎಸ್‌ಡಿಎಂ ಮೆಡಿಕಲ್ ಕಾಲೇಜು, ಸುಚಿರಾಯು, ಅಶೋಕ ಆಸ್ಪತ್ರೆ, ವಿವೇಕಾನಂದ ಆಸ್ಪತ್ರೆ, ಸ್ಪಂದನಾ ಆಸ್ಪತ್ರೆ, ಜರ್ಮನ್ ಆಸ್ಪತ್ರೆ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ವೈದ್ಯರು ಪಾಲ್ಗೊಂಡಿದ್ದರು.