ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆ ಜಾರಿಗೆ ತರುವ ವಿಚಾರದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಇದರ ಸಾಧಕ-ಬಾಧಕಗಳ ಬಗ್ಗೆ ಇನ್ನಷ್ಟು ಚರ್ಚಿಸಿ ಮುಂದಿನ ಸಂಪುಟ ಸಭೆಯಲ್ಲಿ ಕಾಯ್ದೆ ಜಾರಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ಮೇ 1ರಿಂದ ದೇಶವ್ಯಾಪಿ ಜಾರಿಗೆ ಬಂದಿದೆ. ಆದರೆ, ಕಾಯ್ದೆಯನ್ನು ಯಥಾವತ್ ಜಾರಿಗೆ ತರಬೇಕೇ ಅಥವಾ ಬದಲಾವಣೆ ಮಾಡಬೇಕೇ ಎಂಬ ಬಗ್ಗೆ ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತಾದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ.
ಕೇಂದ್ರ ಸರ್ಕಾರದ ರಿಯಲ್ ಎಸ್ಟೇಟ್ ನಿಯಂತ್ರಣ ಕಾಯ್ದೆಯನ್ನು ರಾಜ್ಯದಲ್ಲಿ ಯಥಾವತ್ ಜಾರಿಗೆ ತರಲಾಗುವುದೆಂದು ಈ ಹಿಂದೆ ಕಾನೂನು ಸಚಿವರು ಹೇಳಿದ್ದರಾದರೂ ಸಂಪುಟ ಸಭೆಯಲ್ಲಿ ಕೆಲವರು ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಕಾಯ್ದೆಯಲ್ಲಿ ಸ್ವಲ್ಪ ಮಟ್ಟಿಗೆ ಬದಲಾವಣೆ ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದ್ದು, ಅದರಂತೆ ಕೆಲವು ಮಾರ್ಪಾಡುಗಳನ್ನು ಮಾಡಬೇಕೆಂದು ಸಲಹೆ ನೀಡಿದರು ಎನ್ನಲಾಗಿದೆ.
ಹಾಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್ ಸೇರಿ ವಸತಿಗಳಿಗೆ ಈ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂಬ ಒತ್ತಾಯ ಆಡಳಿತ ಪಕ್ಷದ ಶಾಸಕರಿಂದಲೇ ಬಂದಿತ್ತು. ಈ ಅಂಶವೂ ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದಿದೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬಿತ್ಯಾದಿ ವಿಚಾರಗಳನ್ನೂ ಪರಿಶೀಲಿಸಬೇಕು ಎಂದೂ ಕೆಲವು ಸಚಿವರು ಒತ್ತಾಯಿಸಿದರು ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಜಯಚಂದ್ರ, ರಿಯಲ್ ಎಸ್ಟೇಟ್ ಕಾಯ್ದೆಯನ್ನು ಯಾವ ರೀತಿ ಜಾರಿಗೆ ತರಬೇಕೆಂಬ ಬಗ್ಗೆ ವ್ಯಾಪಕ ಚರ್ಚೆಯಾಗಿದೆ. ಅಧಿಕಾರಿಗಳು ಎಲ್ಲ ರೀತಿಯ ಸಮಜಾಯಿಷಿ ನೀಡಿದ್ದಾರೆ. ಚರ್ಚೆ ಅಪೂರ್ಣವಾಗಿದೆ. ಹೀಗಾಗಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು ಎಂದರು.