ಬೀದರ: ಕೋಟ್ಯಂತರ ರೂ. ಬೆಲೆ ಬಾಳುವ ಸರ್ಕಾರಿ ಜಮೀನನ್ನು ಕಡಿಮೆ ಬೆಲೆಗೆ ಖಾಸಗಿ ವ್ಯಕ್ತಿಗೆ ಮಾರಾಟ ಮಾಡಿದ ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ನಗರಾಧ್ಯಕ್ಷ ರಾಜಕುಮಾರ ಚಿದ್ರಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ನಗರಸಭೆಗೆ ವ್ಯಾಪ್ತಿಗೆ ಸೇರಿದ ಜಾಗವನ್ನು ಕಾನೂನು ಬಾಹೀರವಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಾಗವನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ನಗರಸಭೆ ಆಯುಕ್ತರು ಮತ್ತು ಉಪ ನೋಂದಣಾಧಿಕಾರಿಗಳು ನೋಂದಣಿ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರ ನಿರ್ದೇಶನದ ಮೇರೆಗೆ ಅವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು ಸ್ವಾಗತಾರ್ಹ ಎಂದಿದ್ದಾರೆ. ಆದರೆ, ಇಂಥ ಪ್ರಕರಣಗಳಲ್ಲಿ ಕೇವಲ ಪೌರಾಯುಕ್ತ ಮತ್ತು ಉಪ ನೋಂದಣಾಧಿಕಾರಿ ಅವರು ಮಾಡಿದ್ದಾರೆಯೇ ಅಥವಾ ಸರ್ಕಾರದಲ್ಲಿರುವ ಪ್ರಭಾವಿಗಳು ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆಯೇ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಆ ಮೂಲಕ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪ್ರಕರಣ ಹಾಕಿ ಸತ್ಯಾಂಶ ಹೊರ ಹಾಕಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ಪ್ರಮುಖರಾದ ಎನ್.ಆರ್. ವರ್ಮಾ, ಸಂಗಮೇಶ ನಾಸಿಗಾರ, ಹಣಮಂತ ಬುಳ್ಳಾ ಶಿವಪುತ್ರ ವೈದ್ಯ, ಅರವಿಂದ ಪಾಟೀಲ, ಸುಭಾಷ ಮಡಿವಾಳ, ಬಸವರಾಜ ಜೋಜನಾ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.