ಕೆ.ಆರ್.ಪೇಟೆ: 9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಗಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾರತೀಪುರ ಗ್ರಾಪಂ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಸ್. ಕೆ.ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದ ಆರೋಪಿ ಆಗಿದ್ದಾರೆ.
ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯನ್ನು ಮಾ.31ರಂದು ಶೌಚಾಲಯ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.
ಶಾಲೆ ಪುನರ್ ಆರಂಭಗೊಂಡ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಿಸಿದ್ದಾಳೆ. ಆಗ ಪೋಷಕರು ಸ್ನೇಹಿತರನ್ನು ವಿಚಾರಿಸಿದಾಗ,ಚಂದ್ರು ಮಾಸ್ಟರ್ ಮೈ ಕೈ ಮುಟ್ಟುತ್ತಾರೆ. ಇದನ್ನು ಯಾರಿಗೂಹೇಳಬಾರದು ಎಂದು ಹೆದರಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಸಮ್ಮುಖದಲ್ಲಿ ಪೋಷಕರಿಗೆ ತಿಳಿಸಿದ್ದಾರೆ.
Related Articles
ಇದರಿಂದ ರೊಚ್ಚಿಗೆದ್ದ ಪೋಷಕರು ಆರೋಪಿಯನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ನಾವೇ ಶಿಕ್ಷಕನ ಬಟ್ಟೆ ಬಿಚ್ಚಿ ಕಂಬಕ್ಕೆ ಕಟ್ಟಿ ಥಳಿಸಬೇಕಾಗುತ್ತದೆ ಎಂದು ಒತ್ತಾಯ ಮಾಡಿದ್ದಾರೆ.
ವಿದ್ಯಾರ್ಥಿನಿಯರ ಹೇಳಿಕೆ ಕೇಳುತ್ತಿದ್ದಂತೆಯೇ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಅವರು ಆರೋಪಿ ಶಿಕ್ಷಕ ಎಸ್. ಕೆ.ಚಂದ್ರಶೇಖರ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ನೀಡಿದ್ದಾರೆ.
ವಿಷಯ ತಿಳಿದ ತಕ್ಷಣ ಗಂಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಕಿಕ್ಕೇರಿ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ ಆರೋಪಿ ಎಸ್.ಕೆ.ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.