Advertisement

‘ಅಕ್ರಮ ಮರಳು ದಂಧೆಗೆ ಸರಕಾರದಿಂದ ಬೆಂಬಲ’

06:35 AM Dec 24, 2018 | Karthik A |

ಹುಬ್ಬಳ್ಳಿ: ರಾಜ್ಯದಲ್ಲಿ ಅಕ್ರಮ ಮರಳು ದಂಧೆ ಮಿತಿ ಮೀರಿದ್ದು, ಇದಕ್ಕೆ ಸರಕಾರವೇ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಆರೋಪಿಸಿದರು. ಮರಳು ದಂಧೆಯಲ್ಲಿ ಸಾವಿರಾರು ಕೋ. ರೂ.ಗಳ ಅವ್ಯವಹಾರ ನಡೆಯುತ್ತಿದೆ. ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಕಾಂಗ್ರೆಸ್‌ ಪಕ್ಷದ ಶಾಸಕರು ಭಾಗಿಯಾಗಿದ್ದಾರೆ. ಜನಪ್ರತಿನಿಧಿಗಳು, ಪೊಲೀಸ್‌ ಅಧಿಕಾರಿಗಳು, ಗಣಿ ಇಲಾಖೆಯವರು ಈ ಅಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ತಡೆಗಟ್ಟಲು ಹೋದರೆ ಅವರ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಅಲ್ಲದೆ ವಾಹನ ಹರಿಸಿ ಕೊಲೆಗೂ ಯತ್ನಿಸಲಾಗುತ್ತಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದರು.

Advertisement

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ 
ಸಚಿವ ಸಂಪುಟ ವಿಸ್ತರಣೆ ಅನಂತರ ಕಾಂಗ್ರೆಸ್‌ ಪಕ್ಷದ ನಾಯಕರ ಮಕ್ಕಳು, ಸಹೋದರಿಯರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಸಾಕಷ್ಟು ಅಸಮಾಧಾನ ಉಂಟಾಗಿದೆ. ಸ್ವಲ್ಪ ದಿನ ಕಾದು ನೋಡಿದರೆ ಅದರ ಪರಿಣಾಮ ಏನೆಂಬುದು ಗೊತ್ತಾಗಲಿದ್ದು  ಈ ಮೈತ್ರಿ ಸರಕಾರದ ಭವಿಷ್ಯ ಬಹಿರಂಗವಾಗಲಿದೆ ಎಂದರು.

ಮರಳು ದಂಧೆ ಹತ್ತಿಕ್ಕಲು ಕಠಿನ ಕಾನೂನು: ಡಿಸಿಎಂ
ಬೆಳಗಾವಿ: ರಾ
ಜ್ಯದಲ್ಲಿ ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕಲು ಕಠಿನ ಕಾನೂನು ಜಾರಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರವಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ಮರಳು ದಂಧೆ ಹೆಚ್ಚಾಗಿದೆ. ಸಂಪುಟದ ಉಪ ಸಮಿತಿ ಅಧ್ಯಕ್ಷ ನಾನೇ ಆಗಿರುವುದರಿಂದ ಈ ಬಗ್ಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಮರಳು ಅಕ್ರಮ ದಂಧೆ ತಡೆಯಲು ಹೋದ ಗ್ರಾಮ ಲೆಕ್ಕಾಧಿಕಾರಿ ಮೇಲೆ ಲಾರಿ ಹಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕ್ಕೆ ಸೂಚಿಸಲಾಗುವುದು. ಅಧಿಕಾರಿಗಳ ರಕ್ಷಣೆಗಾಗಿ ಮತ್ತು ಮರಳು ಮಾಫಿಯಾ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next