Advertisement

ರಾಜ್ಯ ಸರ್ಕಾರಕ್ಕೆ ವಾಲಾರಿಂದ ಶಹಬ್ಟಾಸ್‌

06:00 AM Feb 06, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಭ್ರಷ್ಟಾಚಾರ ನಿಗ್ರಹ ದಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ ಎಂದು ರಾಜ್ಯಪಾಲ ವಜೂಬಾಯಿ ವಾಲಾ ಅವರಿಂದ ಹೇಳಿಸುವ ಮೂಲಕ ರಾಜ್ಯ ಸರ್ಕಾರ ಬಿಜೆಪಿಗೆ ತಿರುಗೇಟು ನೀಡಿದೆ.

Advertisement

ಪರಿವರ್ತನಾ ಯಾತ್ರೆ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಭ್ರಷ್ಟಾಚಾರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಬೆನ್ನಲ್ಲೇ ಸೋಮವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಮೂಲಕವೇ ಉತ್ತರ ಕೊಟ್ಟಿದೆ. ರಾಜ್ಯಪಾಲರು ತಮ್ಮ ಭಾಷಣದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ಸಾಧನೆಯ ಗುಣಗಾನ ಮಾಡಿದರು. ಅಷ್ಟೇ ಅಲ್ಲ, ಮಹದಾಯಿ ವಿಚಾರದಲ್ಲಿ ರಾಜ್ಯದ ಹಕ್ಕಿನ ಪಾಲು ದೊರಕಿಸಿಕೊಡಲು ಎಲ್ಲ ರೀತಿಯ ಪ್ರಯತ್ನಗಳನ್ನು ಸರ್ಕಾರ ಮುಂದುವರಿಸುತ್ತದೆ ಎಂದು ರಾಜ್ಯಪಾಲರಿಂದಲೇ ಹೇಳಿಸಲಾಯಿತು.

“ನನ್ನ ಸರ್ಕಾರ ಭ್ರಷ್ಟಾಚಾರದ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸ್ಥಾಪಿಸಿದೆ. ಎಸಿಬಿ ಸ್ಥಾಪನೆಯಾದಾಗಿನಿಂದ 278 ಟ್ರ್ಯಾಪ್‌, 65 ದಾಳಿ ಹಾಗೂ ಇತರೆ 61 ಸೇರಿ 404 ಪ್ರಕರಣ ದಾಖಲಾಗಿವೆ. ಎಸಿಬಿಯಿಂದ ಸರ್ಕಾರ ಸ್ವೀಕರಿಸಿದ 106 ಪ್ರಕರಣಗಳಲ್ಲಿ 72ಕ್ಕೆ ಅಭಿಯೋಜನಾ ಮಂಜೂರಾತಿ ಆದೇಶ ಹೊರಡಿಸಲಾಗಿದೆ. ಜಿಲ್ಲಾ, ತಾಲೂಕು, ಗ್ರಾಮ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸುವ ಮೂಲಕ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವೈಖರಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗಿದೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಿದ ನಂತರ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕ ಸೇವೆಗಳಲ್ಲಿ ಇರುವ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಇ-ಆಡಳಿತ ಉಪಕ್ರಮಗಳ ಸರಣಿಯು ಸಾರ್ವಜನಿಕ ಸೇವೆಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆ ಹೆಚ್ಚಿಸಿದೆ’ ಎಂದು ರಾಜ್ಯಪಾಲರು ಭಾಷಣದಲ್ಲಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಲವಾರು ಪರಿಣಾಕಾರಿ ಕ್ರಮಗಳನ್ನು ತೆಗೆದುಕೊಂಡಿದೆ. ಕೋಮು ಸೌಹಾರ್ದ ಮತ್ತು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲಾಗಿದೆ. ಹಠಾತ್ತನೆ ಘಟಿಸುವ ಕೋಮು ಹಿಂಸಾ ಘಟನೆಗಳ ಬಗ್ಗೆ ದೃಢವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದೂ ರಾಜ್ಯಪಾಲರು ಸರ್ಕಾರವನ್ನು ಸಮರ್ಥಿಸಿಕೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next