ಬೆಂಗಳೂರು : ವಿಶ್ವ ಯುವ ಕೌಶಲ್ಯ ದಿನಾಚರಣೆಯ ದಿನವೂ ಆಗಿರುವ ಇಂದು ವೇಗವಾಗಿ ಬದಲಾಗುತ್ತಿರುವ ತಾಂತ್ರಿಕತೆಯಲ್ಲಿ ಕೌಶಲ್ಯ ವೃದ್ದಿಯ ಪ್ರಾಮುಖ್ಯತೆಗೆ ಅನುಗುಣವಾಗಿ ಬೆಳಗಾವಿಯಲ್ಲಿ ಈಗಾಗಲೇ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಸೊಸೈಟಿ, ಜರ್ಮನಿರವರ ತಾಂತ್ರಿಕ ಸಹಯೋಗದೊಂದಿಗೆ ತಾಂತ್ರಿಕ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಅಂತರಾಷ್ಟ್ರೀಯ ಗುಣಮಟ್ಟದ 5 ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ರಾಜ್ಯದ ವಿವಿಧ ನಗರಗಳಲ್ಲಿ ಸ್ಥಾಪಿಸಲಾಗಿದೆ.
ಇದನ್ನೂ ಓದಿ : ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸಲು BCIC-SDM ನೋಡಲ್ ಸೆಂಟರ್ ಗಳು ಸಹಕಾರಿ: ಶೆಟ್ಟರ್
ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು ಜಮೀನು ಮಂಜೂರಾಗಿರುತ್ತದೆ. 16.43 ಕೋಟಿ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಾಣವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಂಸ್ಥೆಗೆ ವಹಿಸಲು ಸಚಿವ ಸಂಪುಟ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.
ಈ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಗಳು ಪ್ರತಿ ವರ್ಷಕ್ಕೆ 4000 ಅಭ್ಯರ್ಥಿಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡುತ್ತದೆ. ಈ ಕಟ್ಟಡ ಕಾಮಗಾರಿಗಳನ್ನು 3 ತಿಂಗಳೊಳಗೆ ಪ್ರಾರಂಭಿಸಲಾಗುವುದು. ಲೋಕೋಪಯೋಗಿ ಇಲಾಖೆಯು ಉತ್ತಮ ಗುಣಮಟ್ಟದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗುವುದು. ಅಲ್ಪಾವಧಿ ಹಾಗೂ ದೀರ್ಘಾವಧಿ ತರಬೇತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಎಲ್ಲಾ ಸಮುದಾಯದ ಅಭ್ಯರ್ಥಿಗಳು ತರಬೇತಿ ಪಡೆದು ಸ್ವಾವಲಂಭಿಯಾಗಿ ಜೀವನ ನಡೆಸಲು ಅನುವಾಗಲಿದೆ.
ಯುವ ಜನತೆಯು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇಂದಿನ ತಾಂತ್ರಿಕ ಯುಗಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕು. ಪರಿಣತಿ ಪಡೆದ ಅಭ್ಯರ್ಥಿಗಳು ಸ್ವಾವಲಂಭಿಗಳಾಗಿ ಜೀವನ ನಡೆಸಲು ವಿಪುಲ ಅವಕಾಶಗಳಿವೆ. ಅದಕ್ಕೆ ಪೂರಕವಾಗಿ ಉತ್ತಮ ಗುಣಮಟ್ಟದ ತರಬೇತಿಯನ್ನು ಈ ಕೇಂದ್ರವು ನೀಡಲಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 255 ಅಂಕ ಜಿಗಿತ; ದಾಖಲೆ ಪ್ರಮಾಣದಲ್ಲಿ ವಹಿವಾಟು ಅಂತ್ಯ