Advertisement

ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರಕಾರಿ ಆದೇಶ

08:22 PM Nov 21, 2022 | Team Udayavani |

ಬೆಂಗಳೂರು: ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಿ, ಸರಕಾರಿ ಆದೇಶ ಹೊರಬಿದ್ದಿದೆ.

Advertisement

ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು.

ಟಾಸ್ಕ್ ಫೋರ್ಸ್ ಗಳನ್ನು ತಕ್ಷಣ ದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಈ ಕೆಳಕಂಡಂತೆ ಕಾರ್ಯನಿರ್ವಹಿಸಬೇಕಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು. ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನ ಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು. ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆ ಯನ್ನು ಪ್ರಚುರಪಡಿಸುವುದು.

ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು. ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್ ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷ ಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸುವುದು.

Advertisement

ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಟಾಸ್ಕ್ ಪ್ಫೋರ್ಸ್ ಗೆ ಮೂರು ಬೊಲೆರೋ ಜೀಪ್ ಗಳನ್ನು ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆಯುವುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next