Advertisement

ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿ ಗೆ ಸರ್ಕಾರದ ಅನುಮತಿ

10:55 AM Aug 23, 2020 | Suhan S |

ಚಿಕ್ಕಮಗಳೂರು: ಬೇಲೂರು ಮತ್ತು ಚಿಕ್ಕಮಗಳೂರು ನಡುವಿನ ರಸ್ತೆಯನ್ನು ಭಾರತ್‌ ಮಾಲಾ ಯೋಜನೆಯಡಿ ಅಭಿವೃದ್ಧಿಪಡಿಸಲು ಕೇಂದ್ರ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ತಿಳಿಸಿದ್ದಾರೆ.

Advertisement

ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಮಾತನಾಡಿರುವ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕುರಿತಂತೆ ಮನವಿ ಸಲ್ಲಿಸಿ ಚರ್ಚಿಸಿ, ಕಡೂರು ಮತ್ತು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಅತೀ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿ ಸಿದ ಅಧಿಕಾರಿಗಳಿಗೆ ಕೇಂದ್ರ ಸಚಿವರು ಸೂಚಿಸಿದ್ದು ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡುವಂತೆ ತಿಳಿಸಿದರು.

ಮುಖ್ಯ ಇಂಜಿನಿಯರ್‌ (ಪ್ರಾದೇಶಿಕ ಅಧಿಕಾರಿ) ಬೆಂಗಳೂರು ಉತ್ತರ ಇವರೊಂದಿಗೆ ರಾಜ್ಯ ಲೋಕೋಪಯೋಗಿ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸಿದ ಬಳಿಕ ರಸ್ತೆ ಅಭಿವೃದ್ಧಿ ಕುರಿತು ಸ್ಥೂಲವಾಗಿ ಅಧ್ಯಯನ ನಡೆಸಿ ಕೇಂದ್ರಕ್ಕೆ ಸಲ್ಲಿಸಲಾಯಿತು. ಭಾರತ್‌ ಮಾಲಾ ಯೋಜನೆಯಡಿ ಬೇಲೂರು ಮತ್ತು ಚಿಕ್ಕಮಗಳೂರು ನಡುವಿನ ರಸ್ತೆ ಅಭಿವೃದ್ಧಿಪಡಿಸುವಂತೆ ಮನವಿ ಸಲ್ಲಿಸಿದಾಗ ಅದಕ್ಕೆ ಸೂಕ್ತ ಸ್ಪಂದನೆ ದೊರೆತು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರವು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಪ್ರವಾಸಿ ತಾಣವಾಗಿದೆ. ವಾರಾಂತ್ಯದಲ್ಲಿ ಹಾಗೂ ರಜೆ ದಿನಗಳಲ್ಲಿ ಪ್ರವಾಸಿಗರ ವಾಹನ ದಟ್ಟಣೆ ಹೆಚ್ಚಾಗಿ ಅಪಘಾತಗಳು ಆಗಾಗ ಸಂಭವಿಸುತ್ತಿವೆ. ಜಿಲ್ಲಾ ಪೊಲೀಸರು ನಗರಸಭೆ ವ್ಯಾಪ್ತಿಯ 9 ಅಪಘಾತ ವಲಯಗಳನ್ನು ಗುರುತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next