ಬೆಂಗಳೂರು: ಬಿಬಿಎಂಪಿಯಲ್ಲಿ ಆಡಳಿತ ನಡೆಸಲು ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸಮಸ್ಯೆಗಳು ಉದ್ಭವಿಸದಂತೆ ಸಮನ್ವಯ ಸಮಿತಿ ರಚನೆ ಮಾಡಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.
ಬಿಬಿಎಂಪಿ ಉಪ ಮೇಯರ್ ಆಯ್ಕೆ ಸಂಬಂಧ ಬುಧವಾರ ಪಕ್ಷದ ಕಚೇರಿಯಲ್ಲಿ ಪಾಲಿಕೆ ಸದಸ್ಯರು ಹಾಗೂ ಶಾಸಕರ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು,ಅಧಿಕಾರ ನಡೆಸುವ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪರಸ್ಪರ ಗೌರವಯುತ ಚರ್ಚೆಗೆ ಸಮನ್ವಯ ಸಮಿತಿ ರಚನೆ ಮಾಡಬೇಕು. ಈಬಗ್ಗೆ ಕಾಂಗ್ರೆಸ್ ನಾಯಕರಿಗೂ ತಿಳಿಸಿದ್ದೇನೆ ಎಂದು ಹೇಳಿದರು.
ಎರಡು ವರ್ಷಗಳ ಅನುಭವದ ಆಧಾರದ ಮೇಲೆ ಈ ಬಾರಿ ಸಮನ್ವಯ ಸಮಿತಿ ರಚನೆ ಆಗಲೇಬೇಕು. ಪ್ರಮುಖ ತೀರ್ಮಾನ ಅಲ್ಲೇ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ ಎಂದರು. ಎರಡು ಬಾರಿಯ ಹೊಂದಾಣಿಕೆ ವೇಳೆ ಕಾಂಗ್ರೆಸ್‌ನವರು ನಮ್ಮ ಸದಸ್ಯರುಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಈ ಬಾರಿ ಆ ರೀತಿ ಆಗಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಹೇಳಿದ್ದೇನೆ. ನಮ್ಮ ಪಾಲಿಕೆ ಸದಸ್ಯರ ವಾರ್ಡ್‌ಗಳಿಗೆ ಅನುದಾನದಲ್ಲೂ ತಾರತಮ್ಯ ಆಗಬಾರದು ಎಂದು ಸೂಚಿಸಿದ್ದೇನೆ ಎಂದು ತಿಳಿಸಿದರು.
ಹಿಂದುಳಿದವರಿಗೆ: ಬಿಬಿಎಂಪಿ ಉಪ ಮೇಯರ್ ಸ್ಥಾನವನ್ನ ಈ ಹಿಂದೆ ಎರಡು ಬಾರಿ ಒಕ್ಕಲಿಗರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿ ಹಿಂದುಳಿದವರಿಗೆ ಅವಕಾಶ ನೀಡಲು ನಿರ್ಧರಿಸಿದ್ದೇವೆ. ಉಪ ಮೇಯರ್ ಅಭ್ಯರ್ಥಿ ಆಯ್ಕೆಗೆ ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು ಅವರ ಸಲಹೆಯಂತೆ ಆಯ್ಕೆ ಮಾಡಲಾಗುವುದು ಎಂದು ಹೇಳಿದರು. ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಆಯ್ಕೆ ಸಂಬಂಧ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.