ಪಣಜಿ: ಪಂಚಾಯತ್ ಚುನಾವಣೆಯ ಜೊತೆಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಎಲ್ಲ 19 ಉಪಜಾತಿಗಳಿಗೆ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಪ್ರಸಕ್ತ ಪಂಚಾಯತ್ ಚುನಾವಣೆಯಲ್ಲೂ ಒಬಿಸಿಗೆ ಮೀಸಲಾತಿ ನೀಡಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ 8 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿಯ ವಿಮರ್ಶೆಯ ಇ-ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂ ಕೋರ್ಟ ನೀಡಿರುವ ಆದೇಶದಂತೆ ರಾಜ್ಯದಲ್ಲಿ ಒಬಿಸಿಗಳಿಗೆ ಶೇ 27 ಮೀಸಲಾತಿ ನೀಡಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಇದೀಗ ಹೈಕೋರ್ಟ್ ನಿರ್ದೇಶನದಂತೆ ಗೋವಾದಲ್ಲಿ ಅಗಷ್ಟ್ 10 ರಂದು ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಇದಕ್ಕಾಗಿ ಒಬಿಸಿಯ ಎಲ್ಲ ಮಾಹಿತಿಯನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಲಾಗುವುದು. ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಮಾಜಿ ಶಾಸಕ ಸಿದ್ಧಾರ್ಥ ಕುಂಕೊಳಿಕರ್ ಮತ್ತಿತರರು ಉಪಸ್ಥಿತರಿದ್ದರು.