Advertisement

ಶಿಡ್ಲಘಟ್ಟ ತಾಲೂಕಿನಲ್ಲಿ ನ್ಯಾಯಸಮ್ಮುತವಾಗಿ ಚುನಾವಣೆ ನಡೆಸಲು ಸಕಲ ಸಿದ್ದತೆ: ಜಿಲ್ಲಾಧಿಕಾರಿ

07:15 PM Dec 10, 2020 | sudhir |

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ 24 ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಶಾಂತಿಯುತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

Advertisement

ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಾಲೂಕಿನಲ್ಲಿ ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಶಿಡ್ಲಘಟ್ಟ ತಾಲೂಕಿನಲ್ಲಿ ಅವಧಿ ಮುಗಿದಿರುವ 24 ಗ್ರಾಮ ಪಂಚಾಯಿತಿಗಳ 374 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಪೋಲಿಸ್ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕೇಂದ್ರಗಳನ್ನು ಗುರುತಿಸುವ ಕೆಲಸವನ್ನು ಮಾಡಿದ್ದೇವೆ ಚುನಾವಣೆಗಾಗಿ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು ಚುನಾವಣೆ ನಡೆಸಲು ನೇಮಕಗೊಂಡಿರುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತಪೆಟ್ಟಿಗಳನ್ನು ಭದ್ರಗೊಳಿಸಲು ಉದ್ದೇಶಿತ ಭದ್ರತಾ ಕೊಠಿಡಿ(ಸ್ಟ್ರಾಂಗ್‍ರೂಂ) ಮತ್ತು ಚುನಾವಣಾ ಸಿಬ್ಬಂದಿ ತರಬೇತಿ ನೀಡಲು ಉದ್ದೇಶಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯವಸ್ಥೆಗಳನ್ನು ಪರಿಶೀಲಿಸಿ ಮತ ಎಣಿಕೆ ಕೇಂದ್ರ ಮತ್ತು ತರಬೇತಿ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಅವರಿಗೆ ಸೂಚನೆ ನೀಡಿದರು.

ಇದನ್ನೂ ಓದಿ:ನಿವೃತ್ತ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ : ನ್ಯಾಯಕ್ಕಾಗಿ ಮೊರೆಯಿಡುತ್ತಿರುವ ಮಡದಿ

ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯ ಕೊರತೆ ಮತ್ತು ಚುನಾವಣಾ ಶಾಖೆಯಲ್ಲಿ ಶಿರಸ್ತೆದಾರ ಇಲ್ಲದ ಕುರಿತು ಪತ್ರಕರ್ತರು ಗಮನಸೆಳೆದಾಗ ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯಿದೆ ಈಗಾಗಲೇ ಪ್ರಾದೇಶಿಕ ಆಯುಕ್ತರ ಗಮನಕ್ಕೆ ತರಲಾಗಿದ್ದು ಹಂತ ಹಂತವಾಗಿ ಸಿಬ್ಬಂದಿಯ ಕೊರತೆ ನೀಗಿಸಲಿದೆ ಎಂದ ಜಿಲ್ಲಾಧಿಕಾರಿಗಳು ತುರ್ತ ಆಗಿ ಚುನಾವಣಾ ಶಾಖೆಯ ಶಿರಸ್ತೆದಾರ ಮತ್ತು ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ತ್ವರಿತವಾಗಿ ವಿತರಿಸಲು ತಹಶೀಲ್ದಾರ್ ಗ್ರೇಡ್-2 ಅವರನ್ನು ನಿಯೋಜಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Advertisement

ಗೊಂದಲಬೇಡ: ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಮತಗಳ ಎಣಿಕೆ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳಬಾರದೆಂದು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ಮತ ಎಣಿಕೆ ಕೇಂದ್ರಕ್ಕೆ ಬರಲು ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಲು ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಂಡು ಕಠಿಣ ರೀತಿಯ ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಕೀತು ಮಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಡೆಸಲು ನಿಯೋಜನೆಗೊಳ್ಳುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ವೇಳೆಯಲ್ಲಿ ಅಂಚೆ ಮತಪತ್ರವನ್ನು ಹಾಕಲು ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಅರುಂಧತಿ,ಶಿರಸ್ತೆದಾರ ಮಂಜುನಾಥ್,ಶಿರಸ್ತೆದಾರ ಆನಂದಮೂರ್ತಿ,ಚುನಾವಣಾ ಶಾಖೆಯ ಸಾಧಿಕ್‍ಪಾಷ,ರಾಜಸ್ವ ನಿರೀಕ್ಷಕ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next