ಚನ್ನಗಿರಿ: ದೇವರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಆಡಳಿತ ನಡೆಸುವ ಮೂಲಕ ಇತಿಹಾಸ ಸೃಷ್ಟಿಸಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅನ್ನಪೂರ್ಣಮ್ಮ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಲಕ್ಕಮ್ಮ ಆಯ್ಕೆಯಾದರು. ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಬಸವರಾಜು ಶಿವಗಂಗಾ, 16 ಸದಸ್ಯರಲ್ಲಿ 11 ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮದ ಮುಖಂಡರ ಸಹಕಾರದಿಂದ ಅಧ್ಯಕ್ಷರಾಗಿ ಬಿಸಿಎಂ ಮಹಿಳಾ ಮೀಸಲಾತಿಯಿಂದ ಅನ್ನಪೂರ್ಣಮ್ಮ ಅಧ್ಯಕ್ಷರಾಗಿ ಹಾಗೂ ಎಸ್‌ಸಿ ಮಹಿಳಾ ಮೀಸಲಾತಿಯಿಂದ ಉಪಾಧ್ಯಕ್ಷರಾಗಿ ಲಕ್ಕಮ್ಮ ಆಯ್ಕೆಯಾಗಿದ್ದಾರೆ. ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ದೇವರಹಳ್ಳಿಯನ್ನು ಮಾದರಿ ಗ್ರಾಮ ಪಂಚಾಯಿತಿ ಮಾಡಬೇಕಿದೆ ಎಂದರು. ಇಡೀ ದೇಶದಲ್ಲಿ ಬಿಜೆಪಿ ವಿರೋಧಿ ಅಲೆ ಎದ್ದಿದೆ ಎಂಬುದಕ್ಕೆ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯೇ ಸಾಕ್ಷಿ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ.
ಇದನ್ನೂ ಓದಿ:2ನೇ ಹಂತದ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ
ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಭಾಕರ್, ವೆಂಕಟೇಶ್, ಜಿ.ಜಿ. ರಾಮಪ್ಪ, ನೀಲಪ್ಪ ವಡ್ನಾಳ್, ಜಗದೀಶ್, ಬಿಲ್ಲಪ್ಪ, ಎ.ಆರ್. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.