ಬೀದರ: ಗಣಿತ, ವಿಜ್ಞಾನ ಶಿಕ್ಷಕರನ್ನು ಪಡೆಯಲು ಹೆಚ್ಚುವರಿ ಅನುದಾನ ಲಭ್ಯವಿದೆ. ಈ ವಿಷಯಗಳ ಶಿಕ್ಷಕರ ಕೊರತೆ ಇರುವ ಶಾಲೆಗಳ ಮಾಹಿತಿ ನೀಡಿದಲ್ಲಿ ಅಂತಹ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ಪಡೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಕೊರತೆ ಇರುವ ಶಾಲೆಗಳ ಕುರಿತು ಶಿಕ್ಷಣ ಇಲಾಖೆ ಮಾಹಿತಿ ನೀಡಿದರೆ ಕೂಡಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡುವುದಾಗಿ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾತನಾಡಿ, ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 333 ಹಾಗೂ ಪ್ರೌಢ ಶಾಲೆಗಳಲ್ಲಿ 134 ಅತಿಥಿ ಶಿಕ್ಷಕರನ್ನು ನಿಯೋಜಿಸಿ ಪಠ್ಯಚಟುವಟಿಕೆಗಳು ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 26 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದ್ದು, ಇಲ್ಲಿನ ಶಿಕ್ಷಕರಿಗೆ ತರಬೇತಿ ನೀಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಡೆಂಘೀಜ್ವರ ಕ್ರಮ ವಹಿಸಿ: ಜಿಲ್ಲೆಯಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಿ ಕಾಯಿಲೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಾ ಚಿದ್ರಿ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಬೇಕು. ಆಸ್ಪತ್ರೆಯಲ್ಲಿರುವ ಆಂಬ್ಯುಲೆನ್ಸ್‌ಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅರ್ಹರಿಗೆ ಸಿಕ್ಕಿಲ್ಲ ಮನೆ: ಜಿಲ್ಲಾ ಪಂಚಾಯತ್‌ನ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ನಿಟ್ಟೂರಕರ್ ಮಾತನಾಡಿ, ಪ್ರಧಾನ ಮಂತ್ರಿ ವಸತಿ ಯೋಜನೆಯಡಿ ಈಗಾಗಲೇ ಮನೆಗಳು ಮಂಜೂರಾಗಿದ್ದು, ಅರ್ಹರಿಗೆ ಮನೆಗಳು ಸಿಕ್ಕಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಜಿಪಂ ಸಿಇಒ ಪ್ರತಿಕ್ರಿಯಿಸಿ, ಈ ಬಗ್ಗೆ ಕೂಡಲೇ ಮಾಹಿತಿ ಒದಗಿಸುವಂತೆ ಸಂಬಂಧಿ ಸಿದ ಅಧಿ ಕಾರಿಗೆ ನಿರ್ದೇಶನ ನೀಡಿದರು.
ಸಹಾಯಧನ ನೀಡಿ: ಈ ಹಿಂದೆ ಜಿಲ್ಲೆಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿರುವ ರೈತರಿಗೆ ಇನ್ನೂ ಸಹಾಯಧನ ಬಿಡುಗಡೆಯಾಗಿಲ್ಲ. ತಾಡಪತ್ರಿ ವಿತರಣೆ ಸಮರ್ಪಕವಾಗಿ ನಡೆದಿಲ್ಲ ಎನ್ನುವ ದೂರುಗಳು ಬಂದಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸೂಚಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆ, ಕೊಳಚೆ ನಿರ್ಮೂಲನಾ ಮಂಡಳಿ, ಪಶು ಸಂಗೋಪನೆ ಇಲಾಖೆ, ಪಂಚಾಯತ್ ರಾಜ್ ಎಂಜಿನೀಯರಿಂಗ್ ವಿಭಾಗ, ಆಯುಷ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಡಾ| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ತೋಟಗಾರಿಕೆ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಉಪ ಕಾರ್ಯದರ್ಶಿ ಸೂರ್ಯಕಾಂತ ಜೋಜನಾ, ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.