ಶಿವಮೊಗ್ಗ: ಬೆಳೆಯುತ್ತಿರುವ ನಗರಗಳ ಪ್ರಮಾಣಕ್ಕನುಗುಣವಾಗಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಹಾಗೂ ನಗರದ ಸಮಗ್ರ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಪೌರಸೇವೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ವಿಸ್ತರಿಸುವ ಕುರಿತು ಮಹಾತ್ಮ ಗಾಂಧಿನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಮುಖವಾಗಿ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿಗಾಗಿ ತಯಾರಿಸಲಾಗಿದ್ದ ಕ್ರಿಯಾಯೋಜನೆಯ ಅನುಮೋದನೆಗಾಗಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಯೋಜನೆಗೆ ರಾಜ್ಯದ 10 ಜಿಲ್ಲೆಗಳಲ್ಲಿ ಆಯ್ಕೆಯಾಗಿದ್ದು, ಮೈಸೂರು, ಕಲಬುರಗಿ, ಹುಬ್ಬಳ್ಳಿ- ಧಾರವಾಡ ಜಿಲ್ಲೆಗಳಿಗೆ ತಲಾ 150 ಕೋಟಿ ಹಾಗೂ ಮಂಗಳೂರು, ಬೆಳಗಾವಿ, ದಾವಣಗೆರೆ, ಬಳ್ಳಾರಿ, ವಿಜಯಪುರ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ತಲಾ 125 ಕೋಟಿ ಅನುದಾನ ಮಂಜೂರಾಗಿದೆ ಎಂದರು. ಈಗಾಗಲೇ ಮಂಜೂರಾಗಿರುವಅನುದಾನದ ಸದ್ಬಳಕೆಗಾಗಿ ಮಾರ್ಗಸೂಚಿಯನ್ವಯ ಕ್ರಿಯಾಯೋಜನೆಯನ್ನು ತಯಾರಿಸಿದ್ದು, ಶೀಘ್ರವಾಗಿ ಸರ್ಕಾರದಿಂದ ಅನುಮೋದನೆ ಪಡೆದು ಕಾಮಗಾರಿಗಳನ್ನು ಆರಂಭಿಸುವಂತೆ ಸೂಚಿಸಿದ ಅವರು, ಸ್ಮಾರ್ಟ್‌ಸಿಟಿ ಯೋಜನೆ ವ್ಯಾಪ್ತಿಗೊಳಪಡುವ 6 ವಾರ್ಡುಗಳನ್ನು ಹೊರತುಪಡಿಸಿ, ಉಳಿದ ವಾರ್ಡುಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿ ಧಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಲಾ 1 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಸೂಚಿಸಿದರು. ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಾರ್ಡುಗಳಿಗೂ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಎಲ್ಲಾ ಸದಸ್ಯರು, ಶಾಸಕರಿಗೆ ಮಾರ್ಗಸೂಚಿಯೊಂದಿಗೆ ಮಾಹಿತಿ ನೀಡಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಆಯುಕ್ತರಿಗೆ ಸೂಚಿಸಿದ ಸಚಿವರು, ಕೈಗೊಳ್ಳುವ ಕಾಮಗಾರಿ ಒಂದೇ ಆಗಿದ್ದು, ಒಟ್ಟು ಒಂದು ಕೋಟಿ ರೂ. ಮಿತಿಯೊಳಗಿರುವಂತೆ ನೋಡಿಕೊಳ್ಳಬೇಕು. ಈ ಅನುದಾನದಲ್ಲಿ ಅಮೃತ ಯೋಜನೆಯ ಅನುಷ್ಠಾನಕ್ಕೆ 13.00 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಅಲ್ಲದೆ ನಗರದ ಉದ್ಯಾನವನಗಳ ಅಭಿವೃದ್ಧಿಗೂ 2.75 ಕೋಟಿ ರೂ. ಗಳನ್ನು ಖರ್ಚು ಮಾಡಲಾಗುವುದು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಹಾನಗರ ಪಾಲಿಕೆ ಉಪಮಹಾಪೌರ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಯೋಜನಾ ನಿರ್ದೇಶಕ ನಾಗೇಂದ್ರ ಎಫ್. ಹೊನ್ನಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಮತ್ತಿತರರು ಇದ್ದರು