ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿರುವ ಉಪ ಜಿಲ್ಲಾಧಿಕಾರಿ ಕಚೇರಿಯ ಹೊರಭಾಗದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ನಡೆದಿದೆ.
ಘಟನೆಯಲ್ಲಿ ಪತ್ರಕರ್ತರೊಬ್ಬರು ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿನ ಉಪಜಿಲ್ಲಾಧಿಕಾರಿ ಕಚೇರಿಯ ಹೊರಭಾಗದಲ್ಲಿ ಪಹರೆ ನಡೆಸುತ್ತಿದ್ದ ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಆದರೆ ಉಗ್ರರು ಎಸೆದ ಗ್ರೆನೇಡ್ ರಸ್ತೆ ಸಮೀಪ ಬಿದ್ದು ಸ್ಫೋಟಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಗ್ರೆನೇಡ್ ದಾಳಿಯಲ್ಲಿ 12 ವರ್ಷದ ಬಾಲಕ ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೂ ಯಾವುದೇ ಉಗ್ರಗಾಮಿ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.