ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಜೂನ್ 16ರಂದು ಅಧಿಕೃತ ಚಾಲನೆ ಸಿಗಲಿದೆ. ಶುಕ್ರವಾರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮಿ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್ಪೋರ್ಟಲ್ ಲಾಂಚ್ ಮಾಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಜೂನ್ 16ರಿಂದ ಅರ್ಜಿ ಸಲ್ಲಿಕೆ ಮಾಡಬಹುದು. ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು.
ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ ಎಪಿಎಲ್/ ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು2,000 ರೂ DBT ಮೂಲಕ ನೀಡಲಾಗುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ. ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ ಎಂದರು.
ಕೊನೆಯ ದಿನಾಂಕವಿಲ್ಲ: ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ. ಯೋಜನೆಯ ಕುರಿತಂತೆ ಸಂದೇಹ/ ಕುಂದು ಕೊರತೆಗಳಿದ್ದಲ್ಲಿ ಸಹಾಯವಾಣಿ – 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ:ತೇಜಸ್ವಿ ಕಥೆಯ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಿದ ಸಿದ್ದರಾಮಯ್ಯ
ಅರ್ಜಿಗಳನ್ನು ಆನ್ ಲೈನ್ ಮೂಲಕ ಅಥವಾ ಆಫ್ ಲೈನ್ ನಲ್ಲಿ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಅರ್ಜಿದಾರರು ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯ.
ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ನಗದು ವರ್ಗಾವಣೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಇದು ಸಂಪೂರ್ಣ ಉಚಿತ.
ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.