Advertisement
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಶಕ್ತಿ ಯೋಜನೆ ಮರುಶೀಲನೆ ಬಗ್ಗೆ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ವಿಚಾರದಲ್ಲಿ ನನ್ನ ಹೇಳಿಕೆ ತಿರುಚಲಾಗಿದೆ. ಯೋಜನೆ ನಿಲ್ಲಿಸುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದರು.
ಆರ್ಥಿಕವಾಗಿ ಸದೃಢವಾಗಿರುವವರು, ಐಟಿ-ಬಿಟಿ ಸಂಸ್ಥೆಯವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದರು. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು. ಸೌಲಭ್ಯ ಬೇಡ ಎನ್ನುವವರಿಗೆ ಬಲವಂತ ಮಾಡಲು ಸಾಧ್ಯವೇ?
ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇ. 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ ಎಂದರು.