ಉಡುಪಿ: ರಾಜ್ಯ ಸರಕಾರದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಸರಕಾರ ಹಾಗೂ ಜನರ ನಡುವೆ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಉಡುಪಿ ತಾ.ಪಂ.ಕಟ್ಟಡದಲ್ಲಿ ರಾಜ್ಯ ಸರಕಾರದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜನ ಸಾಮಾನ್ಯರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿದೆ. ಅಭಿವೃದ್ಧಿಗಳ ಜತೆಗೆ ಮಹಿಳೆಯರಿಗೆ, ಮಕ್ಕಳಿಗೆ, ಯುವಕರಿಗೆ ಅವರ ಆರ್ಥಿಕ ಸಬಲೀಕರಣಕ್ಕೆ ಸಹಾಯಮಾಡುತ್ತಿದೆ. ಸರಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದರೊಂದಿಗೆ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗೋಣ ಎಂದರು.
ಇದೇ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಅನಿಸಿಕೆ ವ್ಯಕ್ತಪಡಿಸಿದರು. ಸಚಿವರಿಗೆ ಸಮಿತಿ ವತಿಯಿಂದ ಸಮ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿ, ಸರಕಾರದ ವಿವಿಧ ಯೋಜನೆಗಳ ಬಗ್ಗೆ ಬಿಪಿಎಲ್ ಕಾರ್ಡ್ದಾರರ ಮನೆಮನೆಗೆ ತೆರಳಿ ಮಾಹಿತಿ ನೀಡಲಾಗಿದೆ. ಸುಮಾರು 2 ಲಕ್ಷ ಮಂದಿ ಅರ್ಜಿದಾರರನ್ನು ಸೇರಿಸಲಾಗಿದೆ. ಗೃಹಜ್ಯೋತಿ, ಶಕ್ತಿಯೋಜನೆ, ಯುವನಿಧಿ ಸಹಿತ ವಿವಿಧ ಯೋಜನೆಗಳ ಬಗ್ಗೆ ಗ್ಯಾರಂಟಿ ಸಮಿತಿ ಸದಸ್ಯರು ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಬೇಕು ಎಂದರು.
ಜಿ.ಪಂ.ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಅನುಷ್ಠಾನ ಸಮಿತಿ ಸದಸ್ಯರಾದ ಶಬರೀಶ್ ಸುವರ್ಣ, ಉಸ್ತಾದ್ ಸಾದಿಕ್, ಡಾ| ಸಂತೋಷ್ ಕುಮಾರ್, ದಿನೇಶ್ ಜತ್ತನ್ನ, ಪ್ರವೀಣ್ ಕುಮಾರ್ ಹೆಗ್ಡೆ, ಸುಧಾಕರ ಪೂಜಾರಿ
ದಿನೇಶ್ ಪೂಜಾರಿ, ಪ್ರೇಮಲತಾ ಸೋನ್ಸ್, ಗಣೇಶ್ ಶೆಟ್ಟಿಬೆಟ್ಟು, ವೆಂಕಟೇಶ್ ಪೆರಂಪಳ್ಳಿ, ಸಂತೋಷ್ ಶೆಟ್ಟಿ, ಮಾಲತಿ ಆಚಾರ್ಯ, ವಿಜಯ್ ನಾಯ್ಕ, ಅರ್ಚನಾ ದೇವಾಡಿಗ, ಪ್ರಮುಖರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ರಾಜ್ ಕಾಂಚನ್, ಹರಿಪ್ರಸಾದ್ ರೈ, ದಿನೇಶ್ ಕಿಣಿ, ವೆರೋನಿಕಾ ಕರ್ನೇಲಿಯೋ, ಪ್ರಖ್ಯಾತ್ ಶೆಟ್ಟಿ, ದೀಪಕ್ ಕೋಟ್ಯಾನ್, ಮೀನಾಕ್ಷಿ ಮಾಧವ ಬನ್ನಂಜೆ ಸಹಿತ ಪಕ್ಷದ ಕಾರ್ಯಕರ್ತರು, ಫಲಾನುಭವಿಗಳು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ವಿಜಯಾ ಸ್ವಾಗತಿಸಿದರು. ಸತೀಶ್ ಮಂಚಿ ವಂದಿಸಿದರು. ಸತೀಶ್ ಕೊಡವೂರು ನಿರೂಪಿಸಿದರು.