Advertisement

State Govt; ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ: ಬಿಎಸ್‌ವೈ

09:43 PM Feb 05, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಕೈಬಿಡುವ ಸ್ಪಷ್ಟವಾದ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಮೂಲಕ ಇದಕ್ಕೊಂದು ತಳಹದಿ ಹಾಕಲು ರಾಜ್ಯ ಸರಕಾರ ಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದ್ದಾರೆ.

Advertisement

ಕೇಂದ್ರ ಸರಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ಅನುತ್ಪಾದಕ ಗ್ಯಾರಂಟಿಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಿದ್ದರಾಮಯ್ಯನವರ ಕೈಮೀರಿ ಹೋಗಿದೆ. ಎಲ್ಲ ರಂಗಗಳಲ್ಲಿ ಸರಕಾರ ವಿಫ‌ಲವಾಗಿದೆ. ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯುವುದಿಲ್ಲ ಎಂಬ ಸತ್ಯದ ಅರಿವಾಗಿದೆ. ಪದೇಪದೆ ಸುಳ್ಳು ಹೇಳಿ ಸತ್ಯವನ್ನು ಮುಚ್ಚಿಡಬಹುದು ಎಂದುಕೊಂಡಿದ್ದಾರೆ. ಸಿದ್ದರಾಮಯ್ಯನವರ ಆರೋಪಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸದನದಲ್ಲಿ ಸೂಕ್ತ ಉತ್ತರ ನೀಡಿದ್ದಾರೆ ಎಂದು ವಿವರಿಸಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಎನ್‌ಡಿಎ ಸರಕಾರ ಈಗಾಗಲೇ 1,16,828 ಕೋಟಿ ರೂ. ಬಿಡುಗಡೆ ಮಾಡಿದೆ. 15ನೇ ಹಣಕಾಸು ಆಯೋಗದ ಅವಧಿ 2026ರ ವರೆಗೆ ಇದ್ದು ಒಟ್ಟು 2.5 ಲಕ್ಷ ಕೋಟಿಗೂ ಮೀರಿ ತೆರಿಗೆಯ ಹಂಚಿಕೆ ಬರಲಿದೆ. ಇದು ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರ ಇದ್ದಾಗ 14ನೇ ಹಣಕಾಸಿನ ಶಿಫಾರಸಿಗಿಂತ ಅತ್ಯಧಿಕವಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

15ನೇ ಹಣಕಾಸು ಆಯೋಗದಲ್ಲಿ ರಾಜ್ಯ ಸರಕಾರದ ಪಾಲು 3.6ಕ್ಕೆ ಇಳಿಯಲು ನೇರವಾಗಿ ಸಿದ್ದರಾಮಯ್ಯ ಸರಕಾರವೇ ಕಾರಣ. ಯಾಕೆಂದರೆ 15ನೇ ಹಣಕಾಸು ವರದಿ ತಯಾರಿಸುವಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಣಕಾಸಿನ ಆಯೋಗಕ್ಕೆ ಮನವರಿಕೆ ಮಾಡಿಕೊಡಲು ವಿಫ‌ಲವಾದ್ದರಿಂದ ರಾಜ್ಯಕ್ಕೆ ಹಿನ್ನಡೆಯಾಗಿದೆ. 15ನೇ ಹಣಕಾಸು ಆಯೋಗದಲ್ಲಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಈಗಾಗಲೇ ರೂ. 13,985 ಕೋಟಿ ರೂ. ಬಿಡುಗಡೆಯಾಗಿದೆ. ಈ ವರ್ಷ ಇನ್ನೂ ಸುಮಾರು ರೂ.3,500 ಕೋಟಿ ಅನುದಾನ ರಾಜ್ಯ ಸರಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಇಷ್ಟೆಲ್ಲ ಮಾಹಿತಿಗಳನ್ನು ಮುಚ್ಚಿಟ್ಟಿರುವ ಸಿದ್ದರಾಮಯ್ಯನವರು ಅರ್ಧ ಸತ್ಯವನ್ನು ಮಾತ್ರ ಹೇಳಿದ್ದಾರೆ. ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲಿ ತೆರಿಗೆಗಳನ್ನು ಏರಿಸಿದ್ದಾರೆ. ವಿದ್ಯುತ್‌, ಸಾರಿಗೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಅಬಕಾರಿ ಶುಲ್ಕಗಳನ್ನು ಹೆಚ್ಚಿಸಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next