ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಸಿಡಿಸಲು ಸೂಕ್ತ ಮಾರ್ಗಸೂಚಿಗಳನ್ನು ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ನೇತೃತ್ವದಲ್ಲಿ ಶುಕ್ರವಾರ ಗೃಹ ಹಾಗೂ ಒಳಾಡಳಿತ ಇಲಾಖೆಯ ಅಧಿಕಾರಿಗಳು ವಿಧಾನಸೌಧದಲ್ಲಿ ಸಭೆ ನಡೆಸಿ, ಪಟಾಕಿ ಸಿಡಿಸುವ ಕುರಿತಂತೆ ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಲು ನಿರ್ಧರಿಸಿದ್ದಾರೆ. ಸುಪ್ರೀಂ ಕೋರ್ಟ್ ಪಟಾಕಿ ಸಿಡಿಸುವ ಕುರಿತು ದಕ್ಷಿಣದ ರಾಜ್ಯಗಳೇ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದ್ದರಿಂದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಅಧಿಕಾರಿಗಳು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ್ ಭಾಸ್ಕರ್, ನ್ಯಾಯಾಲಯದ ಆದೇಶದಂತೆ ಗೃಹ ಹಾಗೂ ಒಳಾಡಳಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಯಾವ ವೇಳೆ ಪಟಾಕಿ ಹಾರಿಸಬೇಕು ಎನ್ನುವ ಕುರಿತಂತೆ ಒಳಾಡಳಿತ ಇಲಾಖೆ ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಹೇಳಿದರು.