ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ -19 ವೈರಾಣು ಸೋಂಕಿನಿಂದ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸ್ಥಳ ಹಾಗೂ ಕೆಲಸದ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭಗಳಲ್ಲಿ ಹಾಗೂ ವಿವಾಹ ಕಾರ್ಯಕ್ರಮ, ಶವ ಸಂಸ್ಕಾರ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವಿವಾಹಕ್ಕೆ ಅನುಮತಿ ಕೋರಿ ತಹಶೀಲ್ದಾರ್‌ಗೆ ಅರ್ಜಿ ಸಲ್ಲಿಸುವಾಗ ಮುಚ್ಚಳಿಕೆ ಸಲ್ಲಿಸುವುದು ಕಡ್ಡಾಯವಾಗಿದೆ. ಶವ ಸಂಸ್ಕಾರದಲ್ಲಿ 20 ಜನಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿ ಸಲಾಗಿದೆ ಎಂದು ತಿಳಿಸಿದ್ದಾರೆ.
ಸಿನೆಮಾ ಹಾಲ್‌ಗಳು, ಜಿಮ್ನಾಷಿಯಿಂ, ಈಜುಕೊಳಗಳು, ಮನಜರಂಜನಾ ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್‌ಗಳು ಮತ್ತು ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳು ಮತ್ತು ಅಂತಹುದೇ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಗುಂಪುಗೂಡುವಿಕೆ, ದೊಡ್ಡ ಸಭೆಗಳನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.
ರಾತ್ರಿ ಕರ್ಫ್ಯೂ ಜಾರಿ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜೂನ್ 30ರ ಮಧ್ಯರಾತ್ರಿಯಿಂದ ಆಗಸ್ಟ್ 2 ಮಧ್ಯರಾತ್ರಿ ವರೆಗೆ ಜಿಲ್ಲಾದ್ಯಂತ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆ ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಅವ ಧಿಯಲ್ಲಿ ಬರುವ ಎಲ್ಲ ಭಾನುವಾರಗಳ ದಿನ ಜಿಲ್ಲಾದ್ಯಂತ ಪೂರ್ಣ ದಿನದ ಲಾಕ್‌ಡೌನ್ ಜಾರಿ ಮಾಡಲಾಗಿದೆ. ಈ ಕರ್ಫ್ಯೂ ದಿನ ಅಗತ್ಯ ಸರಕು ಸಾಗಾಣಿಕೆ ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ರಾಜ್ಯ ಸರ್ಕಾರದ ತುರ್ತು ಸೇವೆಗಳಲ್ಲಿ ತೊಡಗಿರುವ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಇಲಾಖೆ, ನಿಗಮ ಮಂಡಳಿಗಳು ಶನಿವಾರದ ದಿನ ಕಚೇರಿ ಆರಂಭ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಸೇತು ಆ್ಯಪ್ ಬಳಕೆ: ಪ್ರತಿಯೊಬ್ಬ ಸಾರ್ವಜನಿಕರು ಆರೋಗ್ಯ ಸೇತು ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಈ ಆ್ಯಪ್‌ನಿಂದ ಅನುಕೂಲವಾಗಲಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು, ಅಧಿಕಾರಿಗಳು, ಮುಖ್ಯಸ್ಥರು ಕಡ್ಡಾಯವಾಗಿ ಆ್ಯಪ್‌ಗ್ಳನ್ನು ಬಳಕೆ ಮಾಡಬೇಕು. ಮುಖ್ಯಸ್ಥರು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.
ಕೋವಿಡ್-19 ನಿರ್ವಹಣೆಯ ಲಾಕ್‌ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51ರಿಂದ 60ರ ಉಪಬಂಧಗಳು ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ