ನವದೆಹಲಿ : ಇಂದು ಮಧ್ಯಾಹ್ನ 12 ಗಂಟೆಗೆ ಗುಜರಾತ್ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದೆ. ಚುನಾವಣಾ ಆಯೋಗವು ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯ ಆಕಾಶವಾಣಿ ಭವನದ ರಂಗಭವನದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಪೂರ್ಣ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
2017ರಂತೆ ಗುಜರಾತ್‌ನಲ್ಲಿ ಈ ಭಾರಿಯೂ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆಯೇ ಎಂಬ ಪ್ರಶ್ನೆ ರಾಜಕೀಯ ಪಕ್ಷಗಳಲ್ಲಿ ಚರ್ಚೆಯಾಗುತ್ತಿದೆ.
ಗುಜರಾತ್ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳಿದ್ದು ಬಹುಮತದ ಮ್ಯಾಜಿಕ್ ಫಿಗರ್ 92 ಆಗಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ಪ್ರತಿಪಕ್ಷ ಕಾಂಗ್ರೆಸ್‌ಗೆ 77 ಸ್ಥಾನಗಳು ಮತ್ತು ಇತರರು ಆರು ಸ್ಥಾನಗಳನ್ನು ಪಡೆದರು.
ಎಲ್ಲಾ ಪ್ರಶ್ನೆಗಳು ಮತ್ತು ಊಹಾಪೋಹಗಳ ನಡುವೆ, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಾಯಕರು-ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ತಮ್ಮ ಸಂಪೂರ್ಣ ಶಕ್ತಿಯನ್ನು ಹಾಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ಹಿರಿಯ ನಾಯಕರು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಇದಕ್ಕೂ ಮುನ್ನ ಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿತ್ತು. ಅದರಂತೆ ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ : ಕುಷ್ಟಗಿ: ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಇಹಲೋಕ ತ್ಯಜಿಸಿದ ಪತಿ