ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಮಧ್ಯಾಹ್ನ 3ಗಂಟೆಗೆ ಘೋಷಿಸಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕರ್ವಾ ಚೌತ್ ಗೆ ಪ್ರೇಯಸಿ ಜತೆ ಶಾಪಿಂಗ್…ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ..ಮುಂದೇನಾಯ್ತು
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಹಾಗೂ ರಾಜಕೀಯದ ದೃಷ್ಟಿಕೋನದಿಂದ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಮಹತ್ವ ಪಡೆದಿದೆ. ಗುಜರಾತ್ ವಿಧಾನಸಭೆಯ ಅವಧಿ 2023ರ ಫೆಬ್ರವರಿ 18ರಂದು ಕೊನೆಗೊಳ್ಳಲಿದೆ. ಹಿಮಾಚಲ ಪ್ರದೇಶದ ವಿಧಾನಸಭೆಯ ಅವಧಿ 2023ರ ಜನವರಿ 8ರಂದು ಅಂತ್ಯಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಇತ್ತೀಚೆಗೆ ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಟಿ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯ ಬಲ ಹೊಂದಿದ್ದು, ಬಹುಮತಕ್ಕೆ 92 ಸ್ಥಾನಗಳ ಅಗತ್ಯವಿದೆ. ಹಿಮಾಚಲ ಪ್ರದೇಶ ವಿಧಾನಸಭೆ 68 ಸದಸ್ಯ ಬಲ ಹೊಂದಿದ್ದು, ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿದೆ.
2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 111 ಸ್ಥಾನಗಳಲ್ಲಿ ಜಯಭೇರಿ ಗಳಿಸಿ ಬಹುಮತ ಪಡೆದಿತ್ತು. ಕಾಂಗ್ರೆಸ್ 62, ಬಿಟಿಪಿ 2, ಎನ್ ಸಿಪಿ 1 ಸ್ಥಾನ ಪಡೆದಿತ್ತು. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆಲುವು ಗಳಿಸಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ 21 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಗುಜರಾತ್ ನಲ್ಲಿ ಈ ಬಾರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಈಗಾಗಲೇ ಮತದಾರರಿಗೆ ಹಲವು ಭರವಸೆಗಳನ್ನು ನೀಡಿದ್ದು, ಈ ಹಿನ್ನೆಲೆಯಲ್ಲಿ ದೀರ್ಘಕಾಲದ ಆಡಳಿತ ನಡೆಸಿರುವ ಬಿಜೆಪಿಗೆ ಆಮ್ ಆದ್ಮಿ ಪಕ್ಷ ಸವಾಲೊಡ್ಡಿದಂತಾಗಿದೆ.