ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಲೇವಾರಿ ಮಾಡಿದೆ.
ಗಲಭೆಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಬೇಕೆಂದು ಸುಮಾರು 20 ವರ್ಷಗಳ ಹಿಂದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೇರಿದಂತೆ ಹಲವು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಪ್ರಕರಣ ಸಂಬಂಧ ಬಾಕಿ ಇದ್ದ ಎಲ್ಲ 11 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್, ನ್ಯಾ. ಎಸ್.ರವೀಂದ್ರ ಭಟ್ ಹಾಗೂ ನ್ಯಾ. ಜೆ.ಬಿ.ಪರ್ಡಿವಾಲಾ ಅವರಿದ್ದ ಪೀಠ, “ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಲ್ಲಾ ರೀತಿಯ ವಿಚಾರಣೆಯು ಪೂರ್ಣಗೊಂಡಿದೆ.
ಅರ್ಜಿಗಳನ್ನು ಮುಂದುವರಿಸುವುದರಿಂದ ಯಾವುದೇ ಉಪಯೋಗವಿಲ್ಲ. ಹಾಗಾಗಿ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ,” ಎಂದು ಹೇಳಿತು.
ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ನೇತೃತ್ವದ “ಸಿಟಿಜನ್ಸ್ ಫಾರ್ ಜಸ್ಟಿಸ್ ಅಂಡ್ ಪೀಸ್’ ಸೇರಿದಂತೆ ಹಲವು ಸಂಘಟನೆಗಳು ಗಲಭೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲ್ಲೇರಿದ್ದವು.