ಚೆನ್ನಕೇಶವುಲು ಗೌಡ
ಗುರುಮಠಕಲ್: ಮಿನಾಸಪೂರ ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಮೂಲ ಸೌಕರ್ಯಗಳು ಇಲ್ಲ. ಈ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಚರಂಡಿ ಸ್ವಚ್ಛಗೊಳಿಸಲು ಹಲವು ಬಾರಿ ಮೌಖೀಕವಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಇದಕ್ಕೆ ಸ್ಪಂದಿಸುತ್ತಿಲ್ಲ. ಇದರಿಂದ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿದೆ. ಚರಂಡಿ ವಾಸನೆಯಿಂದ ಜನರು ಮೂಗು ಮುಚ್ಚಿಕೊಂಡು ತಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಿಂಗಳು ಕಳೆದರೂ ಗ್ರಾಪಂ ಸಿಬ್ಬಂದಿ ಕಸ ವಿಲೇವಾರಿ ಮಾಡಿಲ್ಲ. ಸಿಸಿ ರಸ್ತೆ ಸಂಪೂರ್ಣ ಕಸದಿಂದ ತುಂಬಿದೆ. ಗ್ರಾಪಂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಪರ್ಕಿಸಿದರೆ ಸಿಬ್ಬಂದಿಯ ಕೊರತೆ ಇದೆ ಎಂದು ನೆಪ ಹೇಳುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಮಹಿಳೆಯರು ಶೌಚಕ್ಕೆ ಹೋಗಲು ರಸ್ತೆ ಹುಡುಕಾಡುವ ಪರಿಸ್ಥಿತಿ ಇಲ್ಲಿದೆ. ಮಕ್ಕಳು, ವೃದ್ಧರು ತಿರುಗಾಡಲು ಆಗುತ್ತಿಲ್ಲ. ಸೊಳ್ಳೆಗಳ ಕಾಟದಿಂದ ಜನರು ರೋಗಗಳಿಗೆ ತುತ್ತು ಆಗುತ್ತಿದ್ದಾರೆ. ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂದು ಗ್ರಾಮದ ನಿವಾಸಿಗಳು ದೂರಿದ್ದಾರೆ.