ಬೆಂಗಳೂರು: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ (KSNDC) ಗುಡುಗು ಸಹಿತ ಎಲ್ಲೋ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಸೋಮವಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದೆ. ಕೋಲಾರ, ಆನೇಕಲ್‌ನ ಹಲವು ಸ್ಥಳಗಳಲ್ಲಿ ಭಾರಿ ಗಾಳಿ ಮತ್ತು ಆಲಿಕಲ್ಲು ಸಹಿತ ಮಳೆಯಾಗಿದೆ.
ಕೆಎಸ್‌ಎನ್‌ಡಿಸಿ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ. ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಕುರಿತು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ವೀಡಿಯೊಗಳನ್ನು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ಗುಡುಗು ಸಹಿತ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರಿನ ಟಿಸಿ ಪಾಳ್ಯ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಚಂದಾಪುರ, ಆನೇಕಲ್ ತಾಲೂಕಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಬಿರುಸಿನ ಮಳೆಯಾಗಿದೆ. ಗೊಟ್ಟಿಗೆರೆ, ಆನೇಕ, ಜಿಗಣಿ, ಟಿ.ಸಿ.ಪಾಳ್ಯ ಭಾಗದಲ್ಲಿ ಮಳೆಯಾಗಿರುವ ವಿಡಿಯೋಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ.ಮಳೆಯ ಪರಿಣಾಮವಾಗಿ ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.
ನಾಳೆ 14 ಕ್ಷೇತ್ರಗಳಿಗೆ ಮತದಾನ ನಡೆಯುವ ಉತ್ತರ ಕರ್ನಾಟಕದ ಭಾಗದಲ್ಲಿ ತಾಪ ಏರುತ್ತಲೇ ಇದೆ. ಮತದಾನ ನಡೆಯುವ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ 47 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ಕಳೆದ ಏಳು ವರ್ಷಗಳಲ್ಲಿ ಮೇ 6 ರಂದು ದಾಖಲಾಗಿರುವ ಗರಿಷ್ಠ ತಾಪಮಾನ ಇದಾಗಿದೆ ಎಂದು ಕೆಎಸ್‌ಎನ್‌ಡಿಸಿ ತಿಳಿಸಿದೆ.
ಮೇ 8 ರ ನಂತರ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.