Advertisement

ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಸಂತಸವೇ? ಕೇಂದ್ರದ ವಿರುದ್ಧ ಎಚ್ ಡಿಕೆ ಕಿಡಿ

11:33 AM Apr 03, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರಿದಿದೆ. ತೈಲೆ ಬೆಲೆ ಏರಿಕೆ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದು, ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ! ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಎಂದು ವ್ಯಂಗ್ಯವಾಡಿದ್ದಾರೆ.

13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ ಎಂದಿದ್ದಾರೆ.

2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು. ಹಾದಿ ಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬ್ರಾಡ್‌ಫೋರ್ಡ್‌ನಲ್ಲಿ ನೂಲಿನ ತೇರು: ಅವನತಿಯ ದಾರಿಯಲ್ಲಿ ಸಾಗಿದ ಮಹಾನಗರದ ಕಥೆ !

Advertisement

ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ! ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ! ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ʼಶ್ರೀಮಂತರ ಪಕ್ಷ ಬಿಜೆಪಿʼಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ ಎಂದು ಟೀಕೆ ಮಾಡಿದ್ದಾರೆ.

ರಾಜ್ಯ ಸರಕಾರವೂ ಮೌನ!!

ಮುಖ್ಯಮಂತ್ರಿಗಳೂ ಮೌನ!!!

ಮೌನಂ ಶರಣಂ ಗಚ್ಛಾಮಿ.

ಮೌನಿ ಪಕ್ಷ! ಮೌನಿ ಸರಕಾರ! ಮೌನಿ ಮುಖ್ಯಮಂತ್ರಿ! ಡಾ.ಮನಮೋಹನ್ ಸಿಂಗ್ ಅವರನ್ನು ʼಮೌನಿ ಪ್ರಧಾನಿʼ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ? ದನಿಯೆತ್ತಿ ಬೆಲೆ ಏರಿಕೆ ವಿರುದ್ಧ. ಇದು ನನ್ನ ಆಗ್ರಹ.  ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. ʼ150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋʼ ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ ಎಂದು ಎಚ್ ಡಿಕೆ ಟೀಕಿಸಿದ್ದಾರೆ.

ಘನವೆತ್ತ ಮಾಜಿ ಸಿಎಮ್ಮು, ಮಾಜಿ ಕೇಂದ್ರಮಂತ್ರಿಗಳೂ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ? ಅಡುಗೆ ಮನೆಗಳಲ್ಲಿ ತಾಯಂದಿರು, ʼಬೆಲೆ ಏರಿಕೆ ಬೆಂಕಿʼಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ನಾಚಿಕೆಯಾಗಬೇಕು ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next