Advertisement
ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ ಎಂದು ಎಚ್ ಡಿಕೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ
Related Articles
Advertisement
ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ‘3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್ ಸಿಕ್ಕಿದೆ. ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್ ಪಡೆಯುವವರು ಕಾಯಬೇಕು,’ ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ. ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ ಎಂದಿದ್ದಾರೆ.
ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು. ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ಧಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು ಎಂದು ಎಚ್ ಡಿಕೆ ಹೇಳಿದ್ದಾರೆ.
ಇದನ್ನೂ ಓದಿ: ಮೊದಲನೇ ಡೋಸ್ ಪಡೆದು ಅವಧಿ ಮುಗಿಯಿತೆಂಬ ಆತಂಕ ಬೇಡ
ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.