ಬೆಂಗಳೂರು: ವಿಕಿಪೀಡಿಯಾ ಪ್ರಕಾರ ನಿಮ್ಮ ಜನ್ಮವರ್ಷ 1947. ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸ್ವಾತಂತ್ರ ಹೋರಾಟಕ್ಕೆ ಜೆಡಿಎಸ್ ಕೊಡುಗೆ ಏನು ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಸರಣಿ ಟ್ವೀಟ್ ಮೂಲಕ ಉತ್ತರ ನೀಡಿರುವ ಅವರು, ಜೆಡಿಎಸ್ ಸ್ಥಾಪನೆ ಆಗಿದ್ದು 1999ರಲ್ಲಿ. ಆಗ ನೀವು ಎಲ್ಲಿದ್ದೀರಿ? ನಿಮಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ನೀವು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಹೀಗಾಗಿ ಆ ಪಕ್ಷದ ಪೂರ್ವಾಪರದ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ ನಿಮಗೆ ಎಂದು ಪ್ರಶ್ನಿಸಿದ್ದಾರೆ.
ಗೆದ್ದಲು ಕಟ್ಟಿಕೊಂಡ ಹುತ್ತಕ್ಕೆ ಹಾವಿನಂತೆ ಸೇರಿಕೊಂಡ ನೀವು, ಸ್ವಾರ್ಥ ಬೀಜಾಸುರನಾಗಿ ಆ ಪಕ್ಷದ ಮೂಲ ನಾಯಕರನ್ನೆಲ್ಲ ನುಂಗುತ್ತಿರುವ ನಿಮ್ಮ ಬಕಾಸುರ ಬಾಯಲ್ಲಿ ಸ್ವಾತಂತ್ರ್ಯ ಹೋರಾಟದ ಪಾರಾಯಣವೇ? ನಿಮಗೆ ಅದು ಬೇರೆ ಕೇಡು. ಅಧಿಕಾರಕ್ಕಾಗಿ ದೀನ ದಲಿತರು, ಅಲ್ಪಸಂಖ್ಯಾತರ ಹೆಸರು ಬಳಸಿಕೊಂಡು, ಹಾದಿಬೀದಿಯಲ್ಲಿ ಹೈಡ್ರಾಮಾ ಆಡಿ ಕಾಂಗ್ರೆಸ್ ಪಕ್ಷಕ್ಕೆ ವಕ್ಕರಿಸಿಕೊಂಡ ನಿಮಗೆ, ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯಾ? ಖಂಡಿತಾ ಇಲ್ಲ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ
ನೀವು ಹೇಳಿದ ಕಾಂಗ್ರೆಸ್ ಈಗೆಲ್ಲಿದೆ? ನೀವು ಕದ್ದಮಾಲು ಹ್ಯೂಬ್ಲೆಟ್ ವಾಚು ಕಟ್ಟಿದಾಗಲೇ 1947ರ ಕಾಂಗ್ರೆಸ್ ಗೆ ಸಮಾಧಿ ಕಟ್ಟಿದಿರಿ. ಐದು ವರ್ಷಗಳ ನಿಮ್ಮ ಆಡಳಿತದಲ್ಲಿ ಆ ನತದೃಷ್ಟ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಸಾವಿನ ಮೊಳೆ ಹೊಡೆದಿರಿ, ಲೆಕ್ಕ ಹೇಳಬೇಕೆ ಮಿಸ್ಟರ್ ಸಿದ್ದರಾಮಯ್ಯ? ಎಂದು ವ್ಯಂಗ್ಯವಾಡಿದ್ದಾರೆ.