Advertisement

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ, ಹಿಂದಿ ಹೇರಿಕೆ ನಿಲ್ಲಿಸಿ: ಕುಮಾರಸ್ವಾಮಿ

10:10 AM Dec 27, 2021 | Team Udayavani |

ಬೆಂಗಳೂರು: “ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ”. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಯುಜಿಸಿ: ಕನ್ನಡ ಪರೀಕ್ಷೆಗೆ ಹಿಂದಿ ಪ್ರಶ್ನೆಪತ್ರಿಕೆ

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಃ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು. ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next