Advertisement

ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ: ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ

10:00 AM Jun 05, 2021 | Team Udayavani |

ಬೆಂಗಳೂರು: ‘ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೆಯೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–ಎಫ್ ಎಂಡಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಬಗ್ಗ ಟ್ವೀಟ್ ಮಾಡಿರುವ ಅವರು, ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತ ಕೊರಗಿ ಕುಗ್ಗಿ ಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್‌ 19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶು ವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಗತ ವೈಭವ ಪಡೆದೀತೆ ‘ದಿ ರಿಯಲ್ ಕ್ರಿಕೆಟ್’: ಟೆಸ್ಟ್ ಕ್ರಿಕೆಟ್ ನ ಭವಿಷ್ಯವೇನು?

ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕು. ಮುಂದೆ ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು. ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next