ವಿಜಯಪುರ: ಸಿಂದಗಿ ಉಪ ಚುನಾವಣೆಯಲ್ಲಿ ಬಿಜಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಖಚಿತವಾಗಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ತನ್ನ ಕೊನೆ ಚುನಾವಣೆ ಎಂದು ಭಾವನಾತ್ಮಕವಾಗಿ ಮಾತನಾಡಿ ಜೆಡಿಎಸ್ ಅಭ್ಯರ್ಥಿ ಎಂ.ಸಿ. ಮನಗೂಳಿ ಗೆಲುವು ಸಾಧಿಸಿದ್ದರು. ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಯವಾಗಿದೆ ಎಂದು ಗಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಅಚಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಲಿ ಬಿಜೆಪಿ ಅಭ್ಯರ್ಥಿ ಭೂಸನೂರ ಎರಡು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸುತ್ತಲೇ ರೈತರ ಮಕ್ಕಳಿಗೆ ಶಿಷ್ಯ ವೇತನ ಘೋಷಣೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮ ನೀಡಿದ್ದಾರೆ. ಹೀಗಾಗಿ ಸಿಂದಗಿ ಮಾತ್ರವಲ್ಲ ಹಾನಗಲ್ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ವಿಜಯ ಸಾಧಿಸಲಿದ್ದಾರೆ ಎಂದರು.
7500 ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡುವ ಕೆಲಸ ಮಾಡಲಾಗುತ್ತಿದೆ. ಪಿಂಚಣಿ ಮೊತ್ತವನ್ನು 1000 ರೂ. ದಿಂದ 1200 ರೂ.ಗೆ ಹೆಚ್ಚಿಸಲಾಗಿದೆ. ಹೀಗೆ ಹಲವು ಪ್ರಗತಿಪರ ಕಾರ್ಯಕ್ರಮ ನೀಡುತ್ತಿರುವ ನಮ್ಮ ಸರ್ಕಾರದ ಸಾಧನೆ ಮೆಚ್ಚಿ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದರು.
ಇದನ್ನೂ ಓದಿ:ಕೃಷಿ ವಿವಿ ಯ 34ನೇ ಘಟಿಕೋತ್ಸವ : ರಾಜ್ಯಪಾಲ ಗೆಹ್ಲೋಟರಿಂದ ಚಾಲನೆ
ಸ್ಪಷ್ಟ, ಸ್ವಚ್ಛ ಆಡಳಿತ ನೀಡುತ್ತಿರುವ ಬಿಜೆಪಿ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲೂ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.