ಹನೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮಲೆ ಮಾದಪ್ಪನ ದರ್ಶನಕ್ಕೆ ತೆರಳುತ್ತಿದ್ದ ಯುವಕನೋರ್ವ ಮೃತಪಟ್ಟು,ಹಿಂಬದಿ ಸವಾರೆ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ನಗರದ ಭವಾನಿ ನಗರದ ನಿವಾಸಿ ವೆಂಕಟಪ್ಪ(32) ಮೃತ ದುರ್ದೈವಿಯಾಗಿದ್ದು, ಯುವತಿ ಸಾಕ್ಷಿ ಗಂಭೀರವಾಗಿ ಗಾಯಗೊಂಡು ಮೈಸೂರಿನ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳುರಿನ ಬನಶಂಕರಿ 2ನೇ ಹಂತದ ಭವಾನಿ ನಗರದ ನಿವಾಸಿ ವೆಂಕಟಪ್ಪ, ಸಾಕ್ಷಿಯ ಜತೆ ಬೆಂಗಳೂರಿನಿಂದ ಮಲೆ ಮಹದೇಶ್ವರನ ದರ್ಶನಕ್ಕೆ ಸುಜುಕಿ ಆಕ್ಸಸ್ ಬೈಕಿನಲ್ಲಿ ಆಗಮಿಸಿದ್ದರು. ಈ ವೇಳೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 11ನೇ ತಿರುವಿನ ಬಳಿ ಬರುತ್ತಿದ್ದಂತೆ ಬೆಟ್ಟದ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಢಿಕ್ಕಿಯಾಗಿದ್ದು, ಕೂಡಲೇ ಸ್ಥಳೀಯರ ನೆರವಿನಿಂದ 108 ಆಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ರವಾನಿಸುವ ವೇಳೆ ತಲೆಗೆ ತೀವ್ರ ಪೆಟ್ಟಾಗಿದ್ದ ವೆಂಕಟಪ್ಪ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದು, ಸಾಕ್ಷಿಯನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ವೇಳೆ ಮೃತ ವೆಂಕಟಪ್ಪನ ತಮ್ಮ ಆನಂದ ನೀಡಿದ ದೂರಿನನ್ವಯ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.