ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪಿಯ ಬಂಧನ ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೆ, ಪೊಲೀಸರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಸಾಸಕ ಹರೀಶ್ ಪೂಂಜ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರಕಾರಿ ಅಭಿಯೋಜಕರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
ತಎರಡು ಎಫ್ಐಆರ್‌ಗಳನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾ| ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹರೀಶ್ ಪೂಂಜ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಈ ಪ್ರಕರಣದಲ್ಲಿ ಪೊಲೀಸರು ತಮ್ಮ ಕಕ್ಷಿದಾರರನ್ನು ಅನಗತ್ಯ ಕಿರುಕುಳ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕ ತಂದರು. ಇದಕ್ಕೆ ಪ್ರಕ್ರಿಯಿಸಿದ ಹೆಚ್ಚುವರಿ ಸರಕಾರಿ ಅಭಿಯೋಜಕರು, ಪ್ರಕರಣದಲ್ಲಿ ಅರ್ಜಿದಾರ ಆರೋಪಿ ವಿರುದ್ಧ ಸದ್ಯಕ್ಕೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರನ್ನು ಬಂಧಿಸುವ, ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವುದನ್ನು ಮಾಡದಂತೆ ಪೊಲೀಸರಿಗೆ ಸೂಚಿಸಿತು. ಜತೆಗೆ ರಾಜ್ಯ ಸರಕಾರ, ಬೆಳ್ತಂಗಡಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ. 28ಕ್ಕೆ ಮುಂದೂಡಿತು.