ಕಲಬುರಗಿ: ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತಾ ಅವರು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹಾಗೂ ಎಚ್‌ಕೆಆರ್‌ಡಿಬಿ ಕಾರ್ಯದರ್ಶಿಯಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಪ್ರಾದೇಶಿಕ ಆಯುಕ್ತರ ಹುದ್ದೆಯಿಂದ ವರ್ಗಾವಣೆಯಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರಿಂದ ಕಾರ್ಯಭಾರ ವಹಿಸಿಕೊಂಡರು.
ದೆಹಲಿ ನಿವಾಸಿಯಾದ ಹರ್ಷ ಗುಪ್ತಾ ಅವರು ಇಂಜಿನಿಯರಿಂಗ್ ಪದವಿ ಓದಿದ್ದು, 1997ರ ಬ್ಯಾಚಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದಾರೆ. ಹರ್ಷ ಗುಪ್ತಾ ಅವರು ಈ ಹಿಂದೆ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು ಮತ್ತು ಬೀದರ ಜಿಲ್ಲಾಧಿಕಾರಿಗಳಾಗಿ ಹಾಗೂ ಪಶುಸಂಗೋಪನೆ, ಕೆಎಂಎಫ್ ಮತ್ತು ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಗೆ ಸರ್ಕಾರ ನೇಮಿಸಿದೆ. ಈ ಮೊದಲಿದ್ದ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದೆ.
ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಜಹೀರಾ ನಸೀಮ,
ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಂಟಿ ನಿರ್ದೇಶಕ ಬಸವರಾಜ, ಉಪ ಕಾರ್ಯದರ್ಶಿ ಗಂಗುಬಾಯಿ ಮಾನಕರ್, ಮಂಡಳಿ ಸದಸ್ಯರು, ಸಲಹೆಗಾರರು, ಸಿಬ್ಬಂದಿಗಳು ಇದ್ದರು. ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗಣ್ಯರು ವರ್ಗಾವಣೆಯಾದ ಅಮ್ಲನ್ ಆದಿತ್ಯ ಬಿಸ್ವಾಸ್ ಹಾಗೂ ಅಧಿಕಾರ ಸ್ವೀಕರಿಸಿದ ಹರ್ಷ ಗುಪ್ತಾ ಅವರನ್ನು ಸನ್ಮಾನಿಸಿದರು.
ಸಚಿವರ ಸ್ವಾಗತ: ಪ್ರಾದೇಶಿಕ ಆಯುಕ್ತರಾಗಿ ಹಾಗೂ ಎಚ್ ಕೆಆರ್‌ಡಿಬಿ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಹರ್ಷ ಗುಪ್ತಾ ಅವರನ್ನು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಹಾಗೂ ಎಚ್‌ಕೆಆರ್‌ಡಿಬಿ ಅಧ್ಯಕ್ಷ ಡಾ| ಶರಣಪ್ರಕಾಶ ಪಾಟೀಲ ಹೂಗುಚ್ಚ ನೀಡಿ ಸ್ವಾಗತಿಸಿದರು.