ಹೊಸದಿಲ್ಲಿ: ಹರಿಯಾಣ ಪರಿಶಿಷ್ಟ ಜಾತಿ ಆಯೋಗದ ವರದಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಘೋಷಿಸಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 20ರಷ್ಟು ಸರ್ಕಾರಿ ಉದ್ಯೋಗಗಳನ್ನು ಮೀಸಲಿಡಲಾಗುವುದು ಮತ್ತು ವಂಚಿತ ಪರಿಶಿಷ್ಟ ಜಾತಿಗಳಿಗೆ ಶೇ 10ರಷ್ಟು ಕೋಟಾವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ (ಆ.17) ಮಾತನಾಡಿದ ಅವರು, ಇಂದು ಹರಿಯಾಣ ಪರಿಶಿಷ್ಟ ಜಾತಿ ಆಯೋಗದ ವರದಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಪರಿಶಿಷ್ಟ ಜಾತಿಯವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.20ರಷ್ಟು ಮೀಸಲಿಡಲಾಗುತ್ತದೆ. ವಂಚಿತ ಪರಿಶಿಷ್ಟ ಜಾತಿಗಳಿಗೆ ಶೇ 10ರಷ್ಟು ಕೋಟಾವನ್ನು ನಿಗದಿಪಡಿಸಲಾಗುವುದು” ಎಂದರು.
ಮುಂದಿನ ವಿಧಾನಸಭೆ ಚುನಾವಣೆಯ ಬಳಿಕ ಇದನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಸೈನಿ ಇದೇ ವೇಳೆ ಹೇಳಿದರು.
ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಮರುದಿನವೇ ಹರ್ಯಾಣ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕಳೆದ ಶುಕ್ರವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹರ್ಯಾಣ ಮತ್ತು ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಗಳನ್ನು ಘೋಷಿಸಿದರು.
90 ಕ್ಷೇತ್ರಗಳಿರುವ ಹರ್ಯಾಣ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 1ರಂದು ಮತದಾನ ನಡೆದರೆ, ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ ಎಂದು ಸೈನಿ ವಿಶ್ವಾಸ ವ್ಯಕ್ತಪಡಿಸಿದರು.