ಹಾಸನ: ಜಿಲ್ಲೆಯ ವಿಚಾರದಲ್ಲಿ ತಾರತಮ್ಯ ಮಾಡುವುದಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮಾರ್ಗದರ್ಶನ, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಸೋಮವಾರ ಜಿಲ್ಲೆಗೆ ಭೇಟಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವೆ. ಈ ಉದ್ದೇಶದಿಂದಲೇ ಈ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದೇನೆ ಎಂದರು.
ಜನ ಪ್ರತಿನಿಧಿಗಳ ಸಹಕಾರ ಅಗತ್ಯ: ಹಾಸನ ಜಿಲ್ಲೆ ರಾಜ್ಯದಲ್ಲಿ ರಾಜಕೀಯ ಪ್ರತಿಷ್ಠಿತ ಜಿಲ್ಲೆ. ಈ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇದ ರಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕೊಡುಗೆ ಬಹಳಷ್ಟಿದೆ. ಜಿಲ್ಲೆಯ ಎಲ್ಲ ಜನಪ್ರತಿ ನಿಧಿಗಳು ಸಹಕಾರ ಕೊಡಬೇಕು. ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಆಶಿಸಿದರು.
ತೆಂಗು, ಕೊಬ್ಬರಿಗೆ ಬೆಂಬಲ ಬೆಲೆ: ತೆಂಗು, ಕೊಬ್ಬರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಸಿ. ಎನ್. ಬಾಲಕೃಷ್ಣ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಯವರು ನಫೆಡ್ ಮೂಲಕ ಕೊಬ್ಬರಿ ಖರೀದಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿಗೆ ತೆರಳಿದ ನಂತರ ಮತ್ತೂಮ್ಮೆ ಮುಖ್ಯ ಮಂತ್ರಿ ಗಮನ ಸೆಳೆದು ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಲು ವ್ಯವಸ್ಥೆ ಮಾಡುವೆ ಎಂದು ಭರವಸೆ ನೀಡಿದರು.
ಮರಳು ದಂಧೆ ಮಟ್ಟ ಹಾಕಿ: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂಬ ದೂರು ನನ್ನ ಗಮನಕ್ಕೆ ಬಂದಿದೆ. ಎಷ್ಟು ಜನರಿಗೆ, ಎಷ್ಟು ಮರಳು ತೆಗೆ ಯಲು ಪರವಾನಗಿ ನೀಡಲಾಗಿದೆ. ಎಷ್ಟು ಮರಳು ಸಾಗಣೆಯಾಗುತ್ತಿದೆ ಎಂಬ ಬಗ್ಗೆ ನನಗೆ ವರದಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಯವರು ಅಕ್ರಮ ಮರಳು ದಂಧೆ ಮಟ್ಟ ಹಾಕಲೇ ಬೇಕು ಎಂದು ನಿರ್ದೇಶನ ನೀಡಿದರು. ಜಿಪಂ ಅಧ್ಯಕ್ಷೆ ಬಿ.ಎಸ್.ಶ್ವೇತಾ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಎಚ್.ಕೆ. ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇ ಗೌಡ, ಸಿ.ಎನ್.ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಪ್ರೀತಂ ಜೆ.ಗೌಡ, ಎಂ.ಎ. ಗೋಪಾಲಸ್ವಾಮಿ, ಡೀಸಿ ಆರ್.ಗಿರೀಶ್, ಎಸ್ಪಿ ಶ್ರೀನಿವಾಸಗೌಡ, ಸಿಇಒ ಬಿ.ಎ.ಪರಮೇಶ್ ಉಪಸ್ಥಿತರಿದ್ದರು.
ಆಲೂಗಡ್ಡೆ ಬೆಳೆ ನಷ್ಟಕ್ಕೆ ಪರಿಹಾರ: ಹಾಸನ ಜಿಲ್ಲೆಯಲ್ಲಿ ಬಿತ್ತನೆಯಾಗಿರುವ ಆಲೂಗಡ್ಡೆ ಭೂಮಿಯಲ್ಲಿಯೇ ಕೊಳೆತು ಹೋಗುತ್ತಿದೆ ಎಂಬ ದೂರು ಬಂದಿದೆ. ಅಧಿಕಾರಿಗಳಿಂದ ವರದಿ ಬಂದ ನಂತರ ನಷ್ಟ ಅನುಭವಿಸಿದ ಬೆಳೆಗಾರರಿಗೆ ಪರಿ ಹಾರ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಮುಂದಿನ ವಾರ ಮತ್ತೂಮ್ಮೆ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ಮಾಡುವೆ ಎಂದು ಸಚಿವಗೋಪಾಲಯ್ಯ ಹೇಳಿದರು.