Advertisement
ಪ್ರಜ್ವಲ್ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಬುಧವಾರ ಹಾಜರುಪಡಿಸಿದ್ದರು. ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಪ್ರಜ್ವಲ್ ವಿರುದ್ಧ ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಎಸ್‌ಐಟಿ ಮನವಿ ಮಾಡಿತ್ತು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯವು ಜೂನ್ 18ರ ವರೆಗೆ ಬಾಡಿ ವಾರಂಟ್ ಜಾರಿಗೊಳಿಸಿದೆ. ಮಧ್ಯಾಹ್ನ ಪ್ರಜ್ವಲ್ ಅವರನ್ನು ಸಿಐಡಿ ಕಚೇರಿ ಆವರಣದಲ್ಲಿರುವ ಎಸ್‌ಐಟಿ ಕಚೇರಿಗೆ ಅಧಿಕಾರಿಗಳು ಕರೆ ತಂದಿದ್ದಾರೆ. ರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಈಗಾಗಲೇ ವಿಚಾರಣೆ ನಡೆಸಿತ್ತು. ಇದೀಗ ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಪ್ರಜ್ವಲ್ ಈ ಬಾರಿಯೂ ಗೊಂದಲದ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್‌ನಲ್ಲಿ 2 ರಾತ್ರಿ ಕಳೆದಿರುವ ಪ್ರಜ್ವಲ್ ಇದೀಗ ಬುಧವಾರ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಸಿಬಂದಿ ಕೊಟ್ಟ ಅನ್ನ, ಸಾಂಬಾರ್ ಸೇವಿಸಿ ನಿದ್ದೆಗೆ ಜಾರಿದ್ದಾರೆ. ಪ್ರಜ್ವಲ್ ವಿರುದ್ಧ ಎಸ್‌ಐಟಿಯಲ್ಲಿ ಒಟ್ಟು 4 ಪ್ರಕರಣ ದಾಖಲಾಗಿದೆ. ಈ ಪೈಕಿ 1 ಕೇಸ್‌ನಲ್ಲಿ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದೆ. ಇದಾದ ಬಳಿಕವೂ ಪ್ರಜ್ವಲ್ ವಿರುದ್ಧ ದಾಖಲಾದ ಮತ್ತೆರಡು ಪ್ರಕರಣದಲ್ಲಿ ಪ್ರತ್ಯೇಕವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಕೆ.ಆರ್. ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈಗಾಗಲೇ ಎರಡು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣರನ್ನ ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ. ಇದೀಗ 3ನೇ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನು ಸಿಗದೇ ಪ್ರಜ್ವಲ್‌ಗೆ ಸಂಕಷ್ಟ ಎದುರಾಗಿದೆ.