ಚಿಂತಾಮಣಿ: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಮಾಜ ಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕೆಂದು ರಾಯಲ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ರಾಮಕೃಷ್ಣ ಅಭಿಪ್ರಾಯಪಟ್ಟರು.
ನಗರದ ರಾಯಲ್ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ನಗರದ ರಾಯಲ್ ವಿದ್ಯಾ ಸಂಸ್ಥೆಯ ಪದವಿ ವಿದ್ಯಾರ್ಥಿಗಳಿಂದ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ: ವಿದ್ಯಾರ್ಥಿಗಳು ಜ್ಞಾನದ ಜೊತೆ ಜೊತೆಗೆ ರಕ್ತದಾನದಂತಹ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ದೇಶ ಸೇವೆಗೆ ಮುಂದಾಗಿ: ಇಂದಿನ ಯುವ ವಿದ್ಯಾರ್ಥಿಗಳು ತಮ್ಮ ದೈನಂದಿನ ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ, ಪರಿಸರ ಸಂರಕ್ಷಣೆ, ದೇಶ ರಕ್ಷಣೆ, ನೇತ್ರದಾನ ಮುಂತಾದ ಸಮಾಜ ಸೇವಾ ಕಾರ್ಯಗಳಲ್ಲಿ ಹೆಚ್ಚು ಭಾಗವಹಿಸಿ ದೇಶ ಸೇವೆಗೆ ಮುಂದಾಗಬೇಕೆಂದು ತಿಳಿಸಿದರು.
150 ವಿದ್ಯಾರ್ಥಿಗಳಿಂದ ರಕ್ತದಾನ: ಜಿಲ್ಲೆಯ ಚಿಕ್ಕಬಳ್ಳಾಪುರ ಘಟಕದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವೈದ್ಯರಾದ ಡಾ.ಪ್ರಸಾದ್ ನೇತೃತ್ವದಲ್ಲಿ ತಾಲೂಕು ಘಟಕದ ಅಧ್ಯಕ್ಷರಾದ ನಾರಾಯಣರೆಡ್ಡಿ ಅವರ ಮುಂದಾಳತ್ವದಲ್ಲಿ ಸುಮಾರು 10 ರೆಡ್‌ಕ್ರಾಸ್ ಸಿಬ್ಬಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಒಟ್ಟು 150 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
ಶಿಬಿರದಲ್ಲಿ 93 ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು. ರಾಯಲ್ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಕೆ.ಆರ್.ಪ್ರೇಮಲತಾ, ಸಂಸ್ಥೆ ನಿರ್ದೇಶಕರಾದ ಡಾ.ಜಿ.ವಿ.ಕೆ.ರೆಡ್ಡಿ, ಪ್ರಾಂಶುಪಾಲರಾದ ಬಿ.ಫಯಾಜ್‌ಪಾಷಾ, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.